ಬೆಂಗಳೂರು: ನಗರದ ನಾಗರಭಾವಿ ವ್ಯಾಪ್ತಿಯಲ್ಲಿ ಬೈಕ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ನಿನ್ನೆ ರಾತ್ರಿ ಸುಮಾರು 10:30ರ ವೇಳೆಗೆ ನಾಗರಭಾವಿಯ ನಮ್ಮೂರ ತಿಂಡಿ ಸಮೀಪದ ಮಲೆ ಮಹದೇಶ್ವರ ದೇವಸ್ಥಾನದ ಬಳಿ ಅಪಘಾತ ಸಂಭವಿಸಿದೆ. ಮೃತ ಯುವಕನನ್ನು ಪ್ರಕಾಶ್ ಎಂ.ಡಿ (29) ಎಂದು ಗುರುತಿಸಲಾಗಿದೆ. ಅವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮದ ಮೂಲದವರಾಗಿದ್ದಾರೆ.
ಪರಿಚಿತನ ಮಗುವಿನ ಹುಟ್ಟುಹಬ್ಬ ಸಮಾರಂಭಕ್ಕೆ ಪ್ರಕಾಶ್ ತಮ್ಮ ಸ್ನೇಹಿತನೊಂದಿಗೆ ಬೈಕ್ನಲ್ಲಿ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ವಾಪಸ್ಸು ಬರುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಪ್ರಕಾಶ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಬೈಕ್ನಲ್ಲಿದ್ದ ಪ್ರಕಾಶ್ ಅವರ ಸ್ನೇಹಿತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೃತ ಪ್ರಕಾಶ್ ಖಾಸಗಿ ಗೋಲ್ಡ್ ಲೋನ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಘಟನೆ ತಿಳಿಯುತ್ತಿದ್ದಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಮೃತನ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ಕುರಿತು ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



