ಚಿಕ್ಕೋಡಿ: ಭಾರೀ ಮಳೆಯ ಅಬ್ಬರಕ್ಕೆ ಅಥಣಿ ಪಟ್ಟಣದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಬೃಹತ್ ಕಟ್ಟಡವೊಂದು ಕುಸಿದು ಬಿದ್ದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕಟ್ಟಡ ನೆಲಕ್ಕುರುಳುವ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಅಥಣಿ ಪಟ್ಟಣದ ಹಲ್ಯಾಳ ರಸ್ತೆಯಲ್ಲಿರುವ ಈ ಕಟ್ಟಡ ರಾವಸಾಬ ಐಹೊಳೆ ಅವರಿಗೆ ಸೇರಿದ್ದು, ಕಳೆದ ಕೆಲವು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿತ್ತು ಎನ್ನಲಾಗಿದೆ. ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಯ ಪರಿಣಾಮ ಕಟ್ಟಡ ಸಂಪೂರ್ಣವಾಗಿ ಕುಸಿದು ಬಿದ್ದಿದೆ.
ಅದೃಷ್ಟವಶಾತ್ ಕಟ್ಟಡ ಕುಸಿಯುವ ವೇಳೆ ಒಳಗಾಗಲಿ, ಸುತ್ತಮುತ್ತಲಿನ ಪ್ರದೇಶದಲ್ಲಾಗಲಿ ಯಾರೂ ಇರಲಿಲ್ಲ. ಹೀಗಾಗಿ ಸಂಭವಿಸಬಹುದಾಗಿದ್ದ ದೊಡ್ಡ ದುರಂತ ತಪ್ಪಿದೆ.
ಸ್ಥಳೀಯರು ಕಟ್ಟಡ ಕುಸಿತದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಳೆಗಾಲದ ಹಿನ್ನೆಲೆಯಲ್ಲಿ ಅಪಾಯಕಾರಿಯಾಗಿ ನಿಂತಿರುವ ಶಿಥಿಲ ಕಟ್ಟಡಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.



