ರಾಯಚೂರು ಜಿಲ್ಲೆ: ಜಿಲ್ಲೆಯ ಸಿಂಧನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. 8 ಹಾಗೂ 9 ವರ್ಷದ ಸಹೋದರಿಯರ ಮೇಲೆ ನಡೆದ ಈ ಕೃತ್ಯ ಸ್ಥಳೀಯರಲ್ಲಿ ಆಕ್ರೋಶ ಹುಟ್ಟಿಸಿದೆ.
ಪೊಲೀಸ್ ಮಾಹಿತಿ ಪ್ರಕಾರ, ಬಡ ಕುಟುಂಬದ ಪೋಷಕರು ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ, ಕುಟುಂಬಕ್ಕೆ ಪರಿಚಯಸ್ಥನಾಗಿದ್ದ 30 ವರ್ಷದ ಬಾಬಾ ಎಂಬ ವ್ಯಕ್ತಿ ಶೆಡ್‌ಗೆ ನುಗ್ಗಿ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ, ಅತ್ಯಾಚಾರ ಹಾಗೂ ಜಾತಿನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ.



