ತುಮಕೂರು: ಇಂದು ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
ದ್ವಾರಾಳು ಬ್ರಿಡ್ಜ್ ಸಮೀಪ ವೇಗವಾಗಿ ಸಾಗುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟಗೊಂಡ ಪರಿಣಾಮ ಅದು ನಿಯಂತ್ರಣ ತಪ್ಪಿದೆ. ಇದೇ ವೇಳೆ ಅದರ ಹಿಂದಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣವೇ ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಕುರಿತು ಮಾಹಿತಿ ಪಡೆದ ತಾವರೆಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕಾರಣದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.



