ಬಳ್ಳಾರಿ:- ಮನುಷ್ಯನಿಗೆ ನಾಲಿಗೆ ಒಂದೇ ಇರಬೇಕು ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ತಮ್ಮನ್ನು ಎಲ್ಲಿ ಸಿಎಂ ಸ್ಥಾನದಿಂದ ಕೆಳಗೆ ಇಳಿಸುತ್ತಾರೋ ಎಂಬ ಭಯದಿಂದಲೇ ಸಿದ್ದರಾಮಯ್ಯ 5 ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ. 2013ರಲ್ಲಿ ಅಧಿಕಾರ ವಹಿಸಿಕೊಂಡಾಗ ಇದು ಕೊನೆ ಚುನಾವಣೆ ಅಂತ ಸಿದ್ದರಾಮಯ್ಯ ಹೇಳಿದ್ದರು. ಆದರೆ ಈಗ, ಇನ್ನೂ ನಾನೇ ಸಿಎಂ ಎಂದು ಹೇಳುತ್ತಿದ್ದಾರೆ. ಮನುಷ್ಯನಿಗೆ ನಾಲಿಗೆ ಒಂದೇ ಇರಬೇಕು. ಹೇಳಿದ ಮಾತಿನಂತೆ ನಡೆದುಕೊಳ್ಳದಿದ್ರೆ ಯಾರು ಏನು ಮಾಡಲು ಆಗುತ್ತೆ ಎಂದು ಅವರು ಪ್ರಶ್ನಿಸಿದ್ದಾರೆ.
ಭೀಮಾನದಿ ಪ್ರವಾಹದಿಂದಾಗಿ ತತ್ತರಿಸಿರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ ವಿಚಾರವಾಗಿಯೂ ಛಲವಾದಿ ನಾರಾಯಣಸ್ವಾಮಿ ಕಿಡಿ ಕಾರಿದ್ದು, ಸಂಕಷ್ಟ ಬಂದಾಗ ತಪ್ಪಿಸಿಕೊಳ್ಳುವ ಕಲೆ ಸಿದ್ದರಾಮಯ್ಯಗೆ ಗೊತ್ತಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ ನೀಡಿದ್ದರೆ ಜನ ಮೇಲೆ ಬೀಳ್ತಿದ್ದರು. ಅಲ್ಲದೆ ರಸ್ತೆಗುಂಡಿಗಳಿಂದಾಗಿ ಅವರು ಕಾರಲ್ಲಿ ಪ್ರಯಾಣಿಸಲು ಸಾಧ್ಯವಿಲ್ಲ. ಹೀಗಾಗಿಯೇ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.