ಬೆಂಗಳೂರು: ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯದ ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ, ಗದಗ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗಿನಿಂದಲೇ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಲಾಗುತ್ತಿದೆ.
ಬೆಳಿಗ್ಗೆ 6 ಗಂಟೆಯಿಂದಲೇ ಹಲವಾರು ತಂಡಗಳಾಗಿ ವಿಭಜನೆಗೊಂಡು ಕಾರ್ಯಾಚರಣೆ ಆರಂಭವಾಗಿದೆ. ಬೆಂಗಳೂರು ನಗರದಲ್ಲಿ ವೆಟರ್ನರಿ ಕಾಲೇಜು ಹೆಬ್ಬಾಳದ ಅಸಿಸ್ಟೆಂಟ್ ಪ್ರೊಫೆಸರ್ ಇಂದರೇಶ್ ಮತ್ತು ಸಿಂಗನಾಯಕನಹಳ್ಳಿ ಕೋ-ಆಪರೇಟಿವ್ ಸೊಸೈಟಿಯ ಸಿಇಒ ಶಶಿಧರ್ ಮನೆ ಮತ್ತು ಕಚೇರಿಗಳ ಮೇಲೆ ಪರಿಶೀಲನೆ ನಡೆದಿದೆ.
ಯಾದಗಿರಿಯಲ್ಲಿ ಎಲೆಕ್ಟ್ರಿಕಲ್ ಇಲಾಖೆ ಡೆಪ್ಯುಟಿ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ ವಿರೇಶ್ ಹಿರೇಮಠ್ ಅವರ ನಿವಾಸದ ಮೇಲೂ ದಾಳಿ ನಡೆದಿದ್ದು, ಮಂಡ್ಯದಲ್ಲಿ PWD ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್. ಸತೀಶ್ ಅವರ ಮನೆ ಮತ್ತು ಕಚೇರಿಯಲ್ಲಿ ದಾಖಲೆ ಪರಿಶೀಲನೆ ಮಾಡಲಾಗಿದೆ.
ಧಾರವಾಡದಲ್ಲಿ ಗದಗ ಜಿಲ್ಲೆಯ ಶಿರಹಟ್ಟಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಎಂ.ಕೆ. ಸುರಕೋಡ, ಹಾಸನ ಮಹಾನಗರ ಪಾಲಿಕೆಯ ಎಇಇ ಎಂ.ಸಿ. ಸತ್ಯನಾರಾಯಣ ಮತ್ತು ಮೈಸೂರಿನ ಜಲಮಂಡಳಿಯ ಎಇಇ ಆಶಿಫ್ ಇಕ್ಬಾಲ್ ಹಾಗೂ ವಿಜಯಪುರದ ಕೃಷ್ಣಭಾಗ್ಯ ಜಲ ನಿಗಮದ ಜೂನಿಯರ್ ಇಂಜಿನಿಯರ್ ಪ್ರಕಾಶ್ ಪಿ.ಜಿ. ಅವರ ಮನೆಗಳಲ್ಲಿಯೂ ಪರಿಶೀಲನೆ ನಡೆದಿದ್ದು, ಕೆಲವು ಸ್ಥಳಗಳಲ್ಲಿ ಅಧಿಕಾರಿಗಳು ಬಾಗಿಲು ತೆರೆಯದೆ ಹೈಡ್ರಾಮ ಸ್ಥಿತಿ ಉಂಟಾಯಿತು.
ಲೋಕಾಯುಕ್ತ ಡಿವೈಎಸ್‌ಪಿ ನೇತೃತ್ವದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ದಾಖಲಾತಿ ಪರಿಶೀಲನೆಗಿಂತ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.



