ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿಯಾದ ಪರಿಣಾಮ, ಕಾರು ಪಕ್ಕದ ರಸ್ತೆಗೆ ಉರುಳಿಬಿದ್ದ ಘಟನೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಬಳಿ ನಡೆದಿದೆ.
ಮೈಸೂರಿನಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ವೇಳೆ, ಮುಂದೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ನಿಯಂತ್ರಣ ತಪ್ಪಿ ಪಕ್ಕದ ರಸ್ತೆಗೆ ಉರುಳಿಬಿದ್ದಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



