ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಅರೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಹುಲ್ಲು ಸಾಗಿಸುತ್ತಿದ್ದ ಲಾರಿಯೊಂದು ಬೆಂಕಿಗೆ ಆಹುತಿಯಾಗಿದೆ.
ವಿದ್ಯುತ್ ತಂತಿ ತಗುಲಿದ ಪರಿಣಾಮ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.
ಲಾರಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಚಾಲಕ ಸಮಯಪ್ರಜ್ಞೆ ಮೆರೆದು ವಾಹನವನ್ನು ಸಮೀಪದ ಮೈದಾನಕ್ಕೆ ಕೊಂಡೊಯ್ದಿದ್ದಾನೆ. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಲಾರಿಯಲ್ಲಿದ್ದ ಹುಲ್ಲಿಗೆ ಬೆಂಕಿ ವ್ಯಾಪಿಸುತ್ತಿದ್ದಂತೆ ಸ್ಥಳೀಯರು ಹಾಗೂ ಚಾಲಕ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಹೆಚ್ಚಿನ ಪ್ರಮಾಣದಲ್ಲಿ ಹುಲ್ಲು ತುಂಬಿದ್ದರಿಂದ ಬೆಂಕಿ ನಿಯಂತ್ರಣಕ್ಕೆ ತರುವುದು ಕಷ್ಟವಾಗಿತ್ತು.
ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಕೊನೆಗೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯಲ್ಲಿ ಲಾರಿಯಲ್ಲಿದ್ದ ಸಂಪೂರ್ಣ ಹುಲ್ಲಿನ ಲೋಡ್ ಬೆಂಕಿಗೆ ಆಹುತಿಯಾಗಿದ್ದು, ಲಾರಿಗೂ ಹಾನಿಯಾಗಿದೆ. ಚಾಲಕನ ಸಮಯಪ್ರಜ್ಞೆ ಹಾಗೂ ಅಗ್ನಿಶಾಮಕ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯಿಂದ ಹೆಚ್ಚಿನ ಅನಾಹುತ ತಪ್ಪಿದೆ.









