ಬೆಂಗಳೂರು: ಭಾನುವಾರ ಆಡುಗೋಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಟಿಪ್ಪರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ.
ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಟಿಪ್ಪರ್ ವಾಹನ ಡಿಕ್ಕಿ ಹೊಡೆದು ಮಹಿಳೆ ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಟಿಪ್ಪರ್ ಮಹಿಳೆಯ ಕಾಲಿನ ಮೇಲೆ ಹರಿದ ಪರಿಣಾಮ, ಅವರ ಎರಡೂ ಕಾಲುಗಳು ಛಿದ್ರಛಿದ್ರವಾಗಿವೆ.
ಘಟನೆ ನಡೆದ ತಕ್ಷಣವೇ ಸ್ಥಳೀಯರು ಮಹಿಳೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಿಸದೇ, ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಪ್ರಕರಣ ಸಂಬಂಧ ಆಡುಗೋಡಿ ಸಂಚಾರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



