ನೆಲಮಂಗಲ: ಕೇರಳ ರಾಜ್ಯದ ಕಣ್ಣೂರು ಸಮುದ್ರದಲ್ಲಿ ನೆಲಮಂಗಲದ ಯುವಕನೊಬ್ಬ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ನೆಲಮಂಗಲದ ಬ್ಯಾಡರಹಳ್ಳಿ ನಿವಾಸಿ ಸಂತೋಷ್ (21) ಮೃತ ಯುವಕ ಎಂದು ಗುರುತಿಸಲಾಗಿದೆ. ಸಂತೋಷ್ ತನ್ನ ಇಬ್ಬರು ಸ್ನೇಹಿತರೊಂದಿಗೆ ಕೇರಳದ ಕೊಟ್ಟಿಯೂರ್ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದ. ಬಳಿಕ ಅವರು ಕಣ್ಣೂರು ಸಮುದ್ರ ತೀರಕ್ಕೆ ಭೇಟಿ ನೀಡಿದ್ದರು.
ಈ ವೇಳೆ ಮೂವರು ಯುವಕರು ಸಮುದ್ರಕ್ಕೆ ಇಳಿದಿದ್ದು, ಅಲೆಯ ಅಬ್ಬರಕ್ಕೆ ಸಿಲುಕಿದ ಸಂತೋಷ್ ನೀರಿನಲ್ಲಿ ಮುಳುಗಿದ್ದಾನೆ. ಸ್ಥಳದಲ್ಲಿದ್ದವರು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.
ಯುವಕ ಸಮುದ್ರದಲ್ಲಿ ಮುಳುಗುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಘಟನೆ ಕುರಿತು ಮಾಹಿತಿ ಪಡೆದ ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ಸಂತೋಷ್ನ ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಈ ಸಂಬಂಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಯುವಕನ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ಶೋಕ ಆವರಿಸಿದೆ.



