ಚಿಕ್ಕಬಳ್ಳಾಪುರ: ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಂಜಳಾ–ಮುನಿರಾಜು ದಂಪತಿಯ ಪುತ್ರಿ ಮೊನಿಷಾ (25) ಮೃತಪಟ್ಟ ಯುವತಿಯಾಗಿದ್ದಾರೆ.
ಮೃತ ಮೊನಿಷಾ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಘಟನೆ ನಡೆದ ದಿನ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದಿದ್ದು, ಪರಿಣಾಮವಾಗಿ ಯುವತಿ ಸಾವನ್ನಪ್ಪಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



