ಬೆಂಗಳೂರು: ಜೆಡಿಎಸ್ ಎಂಎಲ್ಸಿ ಡಾ. ಸೂರಜ್ ರೇವಣ್ಣ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ವಿನಾಯಿತಿ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ.
ಈ ಪ್ರಕರಣದಲ್ಲಿ ಜೆಡಿಎಸ್ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಡಾ. ಸೂರಜ್ ರೇವಣ್ಣ ಅವರನ್ನು ಬಂಧಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಇದರಿಂದಾಗಿ ಸುಮಾರು ಒಂದು ತಿಂಗಳ ಬಳಿಕ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು.
ಪ್ರಕರಣದ ಹಿನ್ನೆಲೆ
2024ರ ಜೂನ್ 22ರಂದು ಸಂತ್ರಸ್ತರು ಡಾ. ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ಸಲ್ಲಿಸಿದ್ದರು. ಈ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ವಿಧಿಗಳಡಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಹಾಸನ ಜಿಲ್ಲಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದರೂ, ನಂತರ ಪ್ರಕರಣವನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಯಿತು. ಜೂನ್ 23ರಂದು ಸೂರಜ್ ರೇವಣ್ಣರನ್ನು ಬಂಧಿಸಲಾಗಿತ್ತು.
ಇದರ ಮಧ್ಯೆ, ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಅವರ ಆಪ್ತ ಶಿವಕುಮಾರ್ ಸಂತ್ರಸ್ತನ ವಿರುದ್ಧ ಪ್ರತಿದೂರು ನೀಡಿದ್ದರು. ಲೈಂಗಿಕ ಕಿರುಕುಳದ ದೂರು ನೀಡುವುದಾಗಿ ಬೆದರಿಸಿ ಐದು ಕೋಟಿ ರೂ. ಹಣ ನೀಡದಿದ್ದರೆ ಪ್ರಕರಣ ದಾಖಲಿಸುವುದಾಗಿ ಬ್ಲ್ಯಾಕ್ಮೇಲ್ ಮಾಡಲಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದರು.ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿತ್ತು.



