ವಿಜಯಸಾಕ್ಷಿ ಸುದ್ದಿ, ಗದಗ : ಬಿಸಿಎಂ ಇಲಾಖೆಯ ವಿದ್ಯಾರ್ಥಿನಿಲಯಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಬುಧವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿ ಎರಡು ತಿಂಗಳು ಕಳೆದರೂ ಹಾಸ್ಟೆಲ್ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಒಂದೆಡೆ ಬಸ್ ಸೌಕರ್ಯ ಇಲ್ಲದೇ ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಮತ್ತೊಂದೆಡೆ ಹಾಸ್ಟೆಲ್ ಇಲ್ಲದೇ ಬಡ ವರ್ಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಹಾಸ್ಟೆಲ್ ಇಲ್ಲದೇ ವಿದ್ಯಾರ್ಥಿಗಳು ಎಲ್ಲಿ ಆಶ್ರಯ ಪಡೆದು ವಿದ್ಯಾಭ್ಯಾಸ ಮಾಡಬೇಕು ಎಂಬ ಪ್ರಾಥಮಿಕ ಜ್ಞಾನವೂ ಸರಕಾರಕ್ಕೆ ಮತ್ತು ಇಲಾಖೆಯ ಅಧಿಕಾರಿಗಳಿಗೆ ಇಲ್ಲವಾಗಿದೆ. ಇಲಾಖೆಯ ಅಧಿಕಾರಿಗಳು ಶೀಘ್ರವೇ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಬೇಕು ಎಂದು ಒತ್ತಾಯಿಸಿದರು.
ಅಷ್ಟೇ ಅಲ್ಲದೆ, ರಾಜ್ಯದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಇಲಾಖೆಗಳ ವಿದ್ಯಾರ್ಥಿ ನಿಲಯಗಳ ಸಂಖ್ಯೆಯಲ್ಲಿ ಹೆಚ್ಚಳ ಮಾಡಬೇಕು. ಹಿಂದಿನ ವರ್ಷದ ವಿದ್ಯಾರ್ಥಿ ವೇತನವನ್ನು ತಕ್ಷಣವೇ ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಬೇಕು ಎಂದು ಒತ್ತಾಯಿಸಿದರು.
ಬಿಸಿಎಂ ತಾಲೂಕು ವಿಸ್ತರಣಾಧಿಕಾರಿ ಕಚೇರಿ ಎದುರು ಜಮಾಯಿಸಿದ್ದ ವಿದ್ಯಾರ್ಥಿಗಳು ಕಚೇರಿಯೊಳಗೆ ಪ್ರವೇಶಿಸಲು ಮುಂದಾದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾನಿರತ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಈ ನಡುವೆ ಕೆಲ ಪ್ರತಿಭಟನಾಕಾರರು ಕಚೇರಿಯೊಳಗೆ ಪ್ರವೇಶಿಸಲು ಮುಂದಾದಾಗ ನೂಕುನುಗ್ಗಲು ನಡೆದು ಕಿಟಕಿಯ ಗಾಜುಗಳು ಪುಡಿಪುಡಿಯಾದವು. ಇದರಿಂದಾಗಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ಇಲಾಖೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಬೇಡಿಕೆ ಈಡೇರಿಸುವ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆಯಿಂದ ಹಿಂದೆ ಸರಿದರು.
ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿ ಕಲ್ಪಿಸಲು ಒತ್ತಾಯಿಸಿ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲೂ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅರುಣ ಬಾರ್ಕಿ, ಅಕ್ಷಯಕುಮಾರ ಇಟಗಿ, ಪ್ರಜ್ವಲï ರಾಯಬಾಗಿ, ಕುಶಾಲï ಕಾಟವಾ, ವಿಶಾಲï ರಾಯಬಾಗಿ, ರವಿ ಕಲಾಲ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.