ಮಂಡ್ಯ: ಮದ್ದೂರು ತಾಲೂಕಿನ ಕೊಪ್ಪದಲ್ಲಿರುವ ಎನ್ಎಸ್ಎಲ್ ಸಕ್ಕರೆ ಕಾರ್ಖಾನೆಯಲ್ಲಿ ಏರ್ ಕಂಡೀಷನರ್ಗೆ ಗ್ಯಾಸ್ ತುಂಬಿಸುವ ವೇಳೆ ಸಿಲಿಂಡರ್ ಸ್ಫೋಟಗೊಂಡು ಓರ್ವ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ.
ಮೃತರನ್ನು ಮೈಸೂರಿನ ಖಾಸಗಿ ಸಂಸ್ಥೆಯ ನೌಕರ ಮಹಮದ್ ಸಾದಿಕ್ (22) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಮಹಮದ್ ಸಲ್ಮಾನ್ ಎಂದು ತಿಳಿದುಬಂದಿದೆ.
ಕಾರ್ಖಾನೆಯ ಸಕ್ಕರೆ ಉತ್ಪಾದನಾ ವಿಭಾಗದ ಕಂಟ್ರೋಲ್ ರೂಂ ಬಳಿ ಎಸಿಗೆ ಗ್ಯಾಸ್ ತುಂಬಿಸುವ ಕೆಲಸದಲ್ಲಿ ಇಬ್ಬರು ನೌಕರರು ತೊಡಗಿದ್ದರು. ಈ ವೇಳೆ ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ.
ಸ್ಫೋಟದ ತೀವ್ರತೆಗೆ ಇಬ್ಬರಿಗೂ ಗಂಭೀರ ಗಾಯಗಳಾಗಿವೆ. ಕೂಡಲೇ ಕಾರ್ಖಾನೆ ಸಿಬ್ಬಂದಿ ಇಬ್ಬರನ್ನೂ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ಆದರೆ ಮಾರ್ಗಮಧ್ಯದಲ್ಲೇ ಮಹಮದ್ ಸಾದಿಕ್ ಮೃತಪಟ್ಟಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಮಹಮದ್ ಸಲ್ಮಾನ್ ಅವರಿಗೆ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



