ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಇದೀಗ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಸರ ಕಿತ್ತು ಎಸ್ಕೇಪ್ ಆರೋಪಿಯನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಯಶವಂತ್(26) ಬಂಧಿತ ಆರೋಪಿಯಾಗಿದ್ದು, ಡಿಸೆಂಬರ್ 24 ರಂದು ಈ ಘಟನೆ ಸಂಭವಿಸಿತ್ತು. ಧನಲಕ್ಷೀ ಎಂಬ ಮಹಿಳೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ, ಹೊಂಚು ಹಾಕಿ ಕುಳಿತಿದ್ದ ಆರೋಪಿ ದ್ವಿಚಕ್ರ ವಾಹನದಲ್ಲಿ ಬಂದು ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ.
ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ವೇಳೆ ಸರಗಳ್ಳನ ಚಲನವಲನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅದೇ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ ಯಶವಂತ್‌ನಿಂದ ಸುಮಾರು 7 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯಶವಂತ್ ಈ ಹಿಂದೆ ಮೈಸೂರಿನ ಎರಡು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲೂ ಚೈನ್ ಸ್ನಾಚಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನುವುದು ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



