ಶಿವಮೊಗ್ಗ: ನ್ಯಾಯಾಂಗ ಬಂಧನಕ್ಕೊಳಗಾದ ಆರೋಪಿಯೊಬ್ಬ ಜೈಲಿಗೆ ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಹಲ್ಲೆ ಮಾಡಿ ಪರಾರಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಕಲಬುರಗಿ ಕೇಂದ್ರ ಕಾರಾಗೃಹದಿಂದ ಖೈದಿಗಳ ಪರಾರಿಯ ಪ್ರಕರಣದ ಬೆನ್ನಲ್ಲೇ ಈ ಘಟನೆ ಭದ್ರತಾ ವ್ಯವಸ್ಥೆಯ ಕುರಿತು ಪ್ರಶ್ನೆ ಎಬ್ಬಿಸಿದೆ.
ಪರಾರಿಯಾದ ಆರೋಪಿಯನ್ನು ಹೊಸನಗರ ತಾಲೂಕಿನ ಅಡುಗೋಡಿ ಗ್ರಾಮದ ವೆಂಕಟೇಶ್ (36) ಎಂದು ಗುರುತಿಸಲಾಗಿದೆ. 2019-20ರಲ್ಲಿ ಅರಣ್ಯ ವೀಕ್ಷಕ ಅಯಾನ್ ಬೆಡೆಭಾಯಿ ಹಾಗೂ ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿ ಚಕ್ರಪಾಣಿ ಅವರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಬಂಧಿಸಲಾಗಿತ್ತು.
ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕರೆದುಕೊಂಡು ಹೋಗುತ್ತಿದ್ದರು. ಹೊಸನಗರದ ಬಟ್ಟೆಮಲ್ಲಪ್ಪ ಸರ್ಕಲ್ ಬಳಿ ತಲುಪಿದಾಗ ಹಸಿವಾಗಿದೆ ಎಂದು ಊಟ ಕೇಳಿದ ಆರೋಪಿ, ಸಿಬ್ಬಂದಿಯ ಗಮನ ಬೇರೆಡೆ ಸೆಳೆದಿದ್ದಾನೆ.
ಡಿಆರ್‌ಎಫ್‌ಒ ಸುನೀಲ್ ಡಿ. ಕುಂಬಾರ್ ಹಾಗೂ ಸಿಬ್ಬಂದಿ ಇಬ್ರಾಹಿಂ ಊಟ ತರಲು ತೆರಳಿದ ವೇಳೆ, ಜೀಪ್‌ನಲ್ಲಿದ್ದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ವೆಂಕಟೇಶ್ ಪರಾರಿಯಾಗಿದ್ದಾನೆ.
ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಬಟ್ಟೆಮಲ್ಲಪ್ಪ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿವೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಶೀಘ್ರ ಬಂಧಿಸಲು ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ.



