ಉಡುಪಿ: ಮಟ್ಕಾ ಜುಗಾರಿ ಪ್ರಕರಣಗಳಲ್ಲಿ ಪದೇ ಪದೆ ಭಾಗಿಯಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಉಡುಪಿ ನಗರದ ಶಿವಳ್ಳಿ ನಿವಾಸಿ ರಾಮರಾಜ್ ಅಲಿಯಾಸ್ ರಮೇಶ್ ಅರಸ್ (48) ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಆದೇಶ ಹೊರಡಿಸಿದ್ದಾರೆ.
ಆರೋಪಿ ರಾಮರಾಜ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮಟ್ಕಾ ಜುಗಾರಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ನಾಲ್ಕು ಪ್ರಕರಣಗಳಲ್ಲಿ ನ್ಯಾಯಾಲಯ ಶಿಕ್ಷೆ ವಿಧಿಸಿದ್ದು, ಮತ್ತೊಂದು ಪ್ರಕರಣದ ವಿಚಾರಣೆ ಪ್ರಗತಿಯಲ್ಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ಆದೇಶಿಸಲಾಗಿದೆ.
ಗಡಿಪಾರು ಅವಧಿಯಲ್ಲಿ ರಾಮರಾಜ್ ಅವರು ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ವಾಸ್ತವ್ಯ ಹೂಡುವಂತಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

