ನವದೆಹಲಿ: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಂಚಲು ಸುಮಾರು ₹10 ಕೋಟಿ ನಗದು ಸಂಗ್ರಹಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಸಂಸದ ಡಾ. ಕೆ. ಸುಧಾಕರ್ ವಿರುದ್ಧದ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿದೆ.
ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಹಾಗೂ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ಪೀಠ ಪ್ರಕರಣದ ವಿಚಾರಣೆ ನಡೆಸಿತು. ಈ ಹಿಂದೆ ಡಾ. ಕೆ. ಸುಧಾಕರ್ ಅವರಿಗೆ ನೋಟಿಸ್ ಜಾರಿಗೊಳಿಸಿದ್ದ ಸುಪ್ರೀಂ ಕೋರ್ಟ್, ಇದೀಗ ಪ್ರಕರಣದಲ್ಲಿ ನಗದು ವಶಪಡಿಸಿಕೊಂಡ ಚುನಾವಣಾಧಿಕಾರಿಗೂ ನೋಟಿಸ್ ನೀಡಿ ಪ್ರತಿಕ್ರಿಯೆ ಕೇಳಿದೆ.
ಕಳೆದ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರು ಗೇಟ್ ಸಮೀಪ ಚುನಾವಣಾಧಿಕಾರಿಗಳು ವಾಹನ ತಪಾಸಣೆ ನಡೆಸಿದ್ದರು. ಈ ವೇಳೆ ಸುಮಾರು ₹10 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು. ಈ ಹಣವನ್ನು ಮತದಾರರಿಗೆ ಹಂಚುವ ಉದ್ದೇಶದಿಂದ ಸಂಗ್ರಹಿಸಲಾಗಿತ್ತು ಎಂಬ ಆರೋಪದಡಿ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 171E, 171F, 171I ಹಾಗೂ 511ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಈ ಪ್ರಕರಣವನ್ನು ರದ್ದುಪಡಿಸುವಂತೆ ಡಾ. ಕೆ. ಸುಧಾಕರ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಿ ಆದೇಶ ನೀಡಿತ್ತು.
ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಆ ಮೇಲ್ಮನವಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್, ಸದ್ಯ ಪ್ರಕರಣವನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ.
ಮುಂದಿನ ವಿಚಾರಣೆಯಲ್ಲಿ ಹೈಕೋರ್ಟ್ ಆದೇಶದ ಮಾನ್ಯತೆ ಹಾಗೂ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.



