ಬೆಂಗಳೂರು: ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಕರ್ನಾಟಕ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಅನಂತ್ ರಾಮನಾಥ ಹೆಗ್ಡೆ ಅವರಿದ್ದ ಏಕಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ನೀಡಿದೆ. ಪ್ರತಾಪ್ ಸಿಂಹ ಅವರ ಭಾಷಣದ ಅಂಶಗಳನ್ನು ಗಮನಿಸಿದರೆ, ಅದು ಗಲಭೆ ಪ್ರಚೋದಿಸುವ ಹಾಗೂ ಧಾರ್ಮಿಕ ಭಾವನೆಗಳಿಗೆ ಉದ್ದೇಶಪೂರ್ವಕವಾಗಿ ಧಕ್ಕೆ ತರುವ ಸ್ವರೂಪ ಹೊಂದಿರುವಂತೆ ಕಂಡುಬರುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಹೀಗಾಗಿ ಅವರ ವಿರುದ್ಧದ ಆರೋಪಗಳ ಕುರಿತು ತನಿಖೆ ಮುಂದುವರಿಯಬೇಕಿದೆ ಎಂದು ತಿಳಿಸಿದೆ.
ಇದೇ ಪ್ರಕರಣದಲ್ಲಿ ಪ್ರತಾಪ್ ಸಿಂಹ ಅವರಿಗೆ ವಿವಾದಾತ್ಮಕ ಹೇಳಿಕೆ ನೀಡುವಂತೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಕರಣ್ ಸಿ. ಸುಬೇದಾರ್, ಶಿವಕುಮಾರ್ ಮತ್ತು ಗುರುರಾಜ್ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಆಯೋಜಕರು ಪ್ರತಾಪ್ ಸಿಂಹ ಅವರಿಗೆ ಪ್ರಚೋದನೆ ನೀಡಿದ್ದರು ಎಂಬುದಕ್ಕೆ ಸೂಕ್ತ ಪುರಾವೆಗಳಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಪ್ರಕರಣದ ಹಿನ್ನೆಲೆ:
2024ರ ಸೆಪ್ಟೆಂಬರ್ 21ರಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪ್ರತಾಪ್ ಸಿಂಹ, ಹಿಂದೂ ಧಾರ್ಮಿಕ ಮೆರವಣಿಗೆಗಳ ಮೇಲೆ ಕಲ್ಲು ತೂರಾಟ ನಡೆಯುತ್ತಿರುವುದರ ಕುರಿತು ಮಾತನಾಡಿದ್ದರು. ಹಿಂದೂಗಳ ಜನಸಂಖ್ಯೆ ಹೆಚ್ಚಿರುವ ದೇಶದಲ್ಲಿ ಅವರೂ ಕಲ್ಲುಗಳನ್ನು ಕೈಗೆತ್ತಿಕೊಂಡರೆ ಪರಿಸ್ಥಿತಿ ಏನಾಗಬಹುದು ಎಂಬ ಅರ್ಥದ ಹೇಳಿಕೆ ನೀಡಿದ್ದರು.
ಈ ಹೇಳಿಕೆ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂತಿದೆ ಎಂದು ಆರೋಪಿಸಿ ಭಾರತೀಯ ನ್ಯಾಯ ಸಂಹಿತೆಯ ಕಲಂ 299 ಮತ್ತು 192ರ ಅಡಿಯಲ್ಲಿ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಪ್ರತಾಪ್ ಸಿಂಹ ಅವರ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.







