ನವದೆಹಲಿ: ಬೆಳಗಾವಿ ವಿಧಾನಮಂಡಲ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು.
ಈ ಆದೇಶವನ್ನು ಪ್ರಶ್ನಿಸಿ ಸಿಟಿ ರವಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇಂದು(ಮೇ 19) ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಂ. ಸುಂದ್ರೇಶ್ ಮತ್ತು ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರ ಸುಪ್ರೀಂಕೋರ್ಟ್ ಪೀಠ, ಸಿ.ಟಿ. ರವಿ ವಿರುದ್ಧ ವಿಚಾರಣಾ ಪ್ರಕ್ರಿಯೆಗಳಿಗೆ ತಡೆ ನೀಡಿ ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರು ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದೂರು ದಾಖಲಿಸಿದ್ದರು. ಈ ಕುರಿತಂತೆ ಸಿ.ಟಿ.ರವಿ ಅವರನ್ನು ಬಂಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ರವಿ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಸೂಚನೆ ನೀಡಿತ್ತು. ಇದಾದ ನಂತರ ಪ್ರಕರಣ ರದ್ದುಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ, ಹೈಕೋರ್ಟ್ ಸಿಟಿ ರವಿ ಅರ್ಜಿ ವಜಾಗೊಳಿಸಿತ್ತು.
ಈ ಮೂಲಕ ಪ್ರಕರಣ ರದ್ದುಗೊಳಿಸಲು ನಿರಾಕರಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸಿಟಿ ರವಿ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಇದೀಗ ಸುಪ್ರೀಂಕೋರ್ಟ್ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶಿಸಿದೆ.


