ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಓ) ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು (ವಿಎ) ಕಡ್ಡಾಯವಾಗಿ ತಮ್ಮ ಕೇಂದ್ರಸ್ಥಾನದಲ್ಲೇ ಕಾರ್ಯನಿರ್ವಹಿಸಬೇಕು. ಸರ್ಕಾರದ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಅಧಿಕಾರಿಗಳ ಚಲನವಲನದ ಮೇಲೆ ಪ್ರತಿದಿನ ನಿಗಾ ವಹಿಸಿ, ಜನರಿಗೆ ಅವರು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಸೋಮವಾರ ಶಿರಹಟ್ಟಿಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಬರ ಪರಿಹಾರ ಮತ್ತು ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲೂಕು ಮಟ್ಟದ ಅಧಿಕಾರಿಗಳೂ ಕೇಂದ್ರಸ್ಥಾನದಲ್ಲಿಯೇ ಇರಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಗ್ರಾಮಗಳಲ್ಲಿ ಉದ್ಯೋಗವಿಲ್ಲದೆ ಜನರು ಗುಳೆ ಹೋಗುತ್ತಿರುವುದರಿಂದ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಎನ್‌ಆರ್‌ಇಜಿಎ) ಕಾಮಗಾರಿಗಳನ್ನು ತಕ್ಷಣವೇ ಆರಂಭಿಸಬೇಕು ಎಂದು ಸೂಚಿಸಿದರು.
ಶಿರಹಟ್ಟಿ, ಲಕ್ಷ್ಮೇಶ್ವರ ಹಾಗೂ ಮುಂಡರಗಿ ತಾಲೂಕುಗಳಲ್ಲಿ ಶೇ.27ರಷ್ಟು ಮಳೆ ಕೊರತೆ ಉಂಟಾಗಿದ್ದು, ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರತಿ ರೈತರಿಗೆ ಕನಿಷ್ಠ ₹50 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಲಾಗಿದೆ. ಅಲ್ಲದೆ, ಮುಖ್ಯಮಂತ್ರಿ ಘೋಷಿಸಿರುವ ₹1 ಕೋಟಿ ಪರಿಹಾರದ ಕ್ರಿಯಾ ಯೋಜನೆಯನ್ನು ಶೀಘ್ರ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಗ್ರಾಮ ಪಂಚಾಯಿತಿಗಳ ಕಾರ್ಯವೈಖರಿ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಲಮಾಣಿ, ಪಿಡಿಓಗಳು ಪ್ರತಿದಿನ ಗ್ರಾಮ ಪಂಚಾಯಿತಿಯಲ್ಲಿ ಹಾಜರಿದ್ದು ಜಿಪಿಎಸ್ ಆಧಾರಿತ ಫೋಟೋ ಅಪ್‌ಲೋಡ್ ಮಾಡಬೇಕು. ಇದುವರೆಗೆ ಬಹುತೇಕ ಪಂಚಾಯಿತಿಗಳಲ್ಲಿ ಸಮರ್ಪಕ ಕ್ರಿಯಾ ಯೋಜನೆ ಸಿದ್ಧವಾಗಿಲ್ಲ. ಒಂದು ವಾರದೊಳಗೆ ಕ್ರಿಯಾ ಯೋಜನೆ ಪೂರ್ಣಗೊಳಿಸಿ ಗ್ರಾಮೀಣ ಪ್ರದೇಶಗಳಲ್ಲಿ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಹಳೆಯ ಬಿಲ್‌ಗಳನ್ನು ನಿಯಮಾನುಸಾರ ಮಾಡದೇ ಇಚ್ಛೆ ಬಂದವರಿಗೆ ಬಿಲ್ ಪಾವತಿಸಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಇಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ವರದಿ ಸಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ತಹಸೀಲ್ದಾರ್ ಕೆ. ರಾಘವೇಂದ್ರ ರಾವ್, ತಾಪಂ ಇಒ ಆರ್.ವಿ. ದೊಡ್ಡಮನಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಪಿಡಿಓಗಳು ಉಪಸ್ಥಿತರಿದ್ದರು.
“ಪಿಡಿಓ ಹಾಗೂ ವಿಎಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿರಬೇಕು. ಒಂದು ವಾರದೊಳಗೆ ಉದ್ಯೋಗ ಖಾತರಿ ಕಾಮಗಾರಿಗಳು ಆರಂಭವಾಗಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಉಸ್ತುವಾರಿ ಸಚಿವರಿಗೆ ವರದಿ ಸಲ್ಲಿಸಲಾಗುವುದು.”
– ಡಾ. ಚಂದ್ರು ಲಮಾಣಿ, ಶಾಸಕ, ಶಿರಹಟ್ಟಿ



