ವಿಜಯಸಾಕ್ಷಿ ಸುದ್ದಿ, ಬೆಳಗಾವಿ-ಸುವರ್ಣಸೌಧ: ಬೆಂಗಳೂರು ನಗರದಲ್ಲಿ ತ್ಯಾಜ್ಯ ಉತ್ಪಾದನೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಪ್ರತಿದಿನ ಸುಮಾರು 5600 ಮೆ.ಟನ್ ತ್ಯಾಜ್ಯ ಉತ್ಪಾದನೆ ಆಗುತ್ತಿದೆ. ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ಘಟಕಗಳನ್ನು ನಿರ್ಮಿಸಿ, ಸಮಗ್ರ ಘನತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಸದಸ್ಯ ಧೀರಜ್ ಮುನಿರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉತ್ತರಿಸಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸಲು ನಗರದ 2 ದಿಕ್ಕುಗಳಲ್ಲಿ (ಉತ್ತರ ಮತ್ತು ದಕ್ಷಿಣ) ಘಟಕಗಳನ್ನು ಸ್ಥಾಪಿಸಲು ಉದ್ದೇಶಿದೆ. ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ಘಟಕಗಳನ್ನು ನಿರ್ಮಿಸಿ, ಹಸಿ ತ್ಯಾಜ್ಯದ ಬಯೋ ಮಿಥನೇಷನ್ನಿಂದ ಅನಿಲ ಉತ್ಪಾದನೆ, ಗೊಬ್ಬರ ತಯಾರಿಕೆ, ಒಣತ್ಯಾಜ್ಯದ ಮರುಬಳಕೆ ಮತ್ತು ವಿದ್ಯುತ್ ಉತ್ಪಾದನೆ ಇತ್ಯಾದಿ ಕಾರ್ಯಗಳನ್ನು ನಿರ್ವಹಿಸಲಾಗುತ್ತಿದೆ ಎಂದು ವಿವರಿಸಿದರು.
ನೂತನ ಮಾದರಿಯ ಟೆಕ್ನಾಲಜಿ ಬಳಸಿಕೊಂಡು ಘನತ್ಯಾಜ್ಯ ವಿಲೇವಾರಿ ಮಾಡಲು ಸರ್ಕಾರ ಕ್ರಮ ವಹಿಸುತ್ತಿದೆ. ಒಟ್ಟಾರೆ, ಜನ ಸಾಮಾನ್ಯರ ಮೇಲೆ ಯಾವುದೇ ದುಷ್ಪರಿಣಾಮ ಉಂಟಾಗದಂತೆ ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡಲು ಸರ್ಕಾರ ಕ್ರಮ ವಹಿಸುತ್ತಿದೆ ಎಂದು ಭರವಸೆ ನೀಡಿದರು.



