ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ ಅವರಿಗೆ ಮತ್ತೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿದೆ. ಜೈಲಿನಲ್ಲಿ ಚಳಿ ಹೆಚ್ಚಾಗಿರುವುದರಿಂದ ಬೆನ್ನು ನೋವು ಉಲ್ಬಣಗೊಂಡಿದ್ದು, ಫಿಸಿಯೋಥೆರಪಿ ಚಿಕಿತ್ಸೆ ಕೊಡಿಸುವಂತೆ ದರ್ಶನ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಬೆಂಗಳೂರಿನ 59ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ನಡೆಯಿತು. ಈ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ದರ್ಶನ್, ತಮ್ಮ ಆರೋಗ್ಯ ಸಮಸ್ಯೆಯನ್ನು ನ್ಯಾಯಾಧೀಶರ ಮುಂದೆ ವಿವರಿಸಿದರು.
ಜೈಲಿನ ಚಳಿಯಿಂದ ಬೆನ್ನು ನೋವು ಹೆಚ್ಚಾಗಿದೆ ಎಂದ ದರ್ಶನ್!
ಜೈಲಿನಲ್ಲಿ ವಿಪರೀತ ಚಳಿ ಇರುವುದರಿಂದ ಬೆನ್ನು ನೋವು ಮತ್ತೆ ಕಾಣಿಸಿಕೊಂಡಿದೆ. ನೋವು ತೀವ್ರವಾಗಿದ್ದು, ಫಿಸಿಯೋಥೆರಪಿ ಚಿಕಿತ್ಸೆಯ ಅಗತ್ಯವಿದೆ. ಹೀಗಾಗಿ ಸೂಕ್ತ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು ಎಂದು ದರ್ಶನ್ ನ್ಯಾಯಾಧೀಶರ ಮುಂದೆ ಮನವಿ ಮಾಡಿಕೊಂಡಿದ್ದಾರೆ.
ದರ್ಶನ್ ಅವರ ಮನವಿಯನ್ನು ಆಲಿಸಿದ ನ್ಯಾಯಾಲಯ, ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಜೈಲು ನಿಯಮಗಳ ಪ್ರಕಾರ ಸೂಕ್ತ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ.
ಬೆನ್ನು ನೋವಿನ ಕಾರಣಕ್ಕೆ ಈ ಹಿಂದೆಯೂ ಜಾಮೀನು ಪಡೆದಿದ್ದ ದರ್ಶನ್!
ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸೌಲಭ್ಯ ಪಡೆದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು. ಬಳ್ಳಾರಿ ಜೈಲಿನಲ್ಲಿದ್ದ ಸಂದರ್ಭದಲ್ಲಿಯೂ ದರ್ಶನ್ ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವುದಾಗಿ ತಿಳಿಸಿದ್ದರು.
ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂಬ ಕಾರಣ ನೀಡಿ ದರ್ಶನ್ ಹೈಕೋರ್ಟ್ನಿಂದ ಆರು ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು. ಆದರೆ, ಆ ಅವಧಿಯಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿರಲಿಲ್ಲ.
ಮತ್ತೆ ಫಿಸಿಯೋಥೆರಪಿ ಚಿಕಿತ್ಸೆಗಾಗಿ ಕೋರ್ಟ್ ಮೊರೆ!
ಮಧ್ಯಂತರ ಜಾಮೀನು ಅವಧಿಯ ಬಳಿಕ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ದರ್ಶನ್, ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದೀಗ ಬೆನ್ನು ನೋವು ಮತ್ತೆ ಉಲ್ಬಣಗೊಂಡಿರುವುದಾಗಿ ತಿಳಿಸಿ ಚಿಕಿತ್ಸೆಗಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಫಿಸಿಯೋಥೆರಪಿ ಚಿಕಿತ್ಸೆ ಒದಗಿಸುವ ಸಂಬಂಧ ಜೈಲು ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸಲು ನ್ಯಾಯಾಲಯ ಸೂಚಿಸಿರುವ ಹಿನ್ನೆಲೆಯಲ್ಲಿ, ಮುಂದಿನ ಕ್ರಮದ ಬಗ್ಗೆ ಗಮನ ಹರಿಸಲಾಗಿದೆ. ದರ್ಶನ್ ಅವರಿಗೆ ಫಿಸಿಯೋಥೆರಪಿ ಚಿಕಿತ್ಸೆಗೆ ಅವಕಾಶ ಸಿಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.









