ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಅವರ ಬೆನ್ನುನೋವಿನ ಸಮಸ್ಯೆ ಹಾಗೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಗೆ ಸಂಬಂಧಿಸಿದ ವೈದ್ಯಕೀಯ ವರದಿ ಇಂದು (ನವೆಂಬರ್ 12) ನ್ಯಾಯಾಲಯಕ್ಕೆ ಸಲ್ಲಿಕೆಯಾಗಲಿದೆ. ಇದೇ ವೇಳೆ ಪ್ರಕರಣದ ಸಾಕ್ಷಿ ಪುನೀತ್ ಅವರ ಕ್ರಾಸ್ ಎಕ್ಸಾಮಿನೇಷನ್ ಪ್ರಕ್ರಿಯೆಯೂ ಇಂದಿನಿಂದ ಮತ್ತೆ ಮುಂದುವರಿಯಲಿದೆ.

ದರ್ಶನ್ ಅವರ ಬೆನ್ನುನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆ ಮತ್ತು ಫಿಸಿಯೋಥೆರಪಿ ಕುರಿತು ಸಂಪೂರ್ಣ ವೈದ್ಯಕೀಯ ವರದಿ ಸಲ್ಲಿಸುವಂತೆ 59ನೇ ಸಿಸಿಹೆಚ್ ನ್ಯಾಯಾಲಯ ಈ ಹಿಂದೆ ಸೂಚನೆ ನೀಡಿತ್ತು.
ದರ್ಶನ್ ಆರೋಗ್ಯ ಸ್ಥಿತಿಯ ಬಗ್ಗೆ ವರದಿ ಸಲ್ಲಿಕೆ
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ವೈದ್ಯಾಧಿಕಾರಿಗಳು ದರ್ಶನ್ ಅವರ ಪ್ರಸ್ತುತ ಆರೋಗ್ಯ ಸ್ಥಿತಿ, ಬೆನ್ನುನೋವಿನ ತೀವ್ರತೆ, ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ಫಿಸಿಯೋಥೆರಪಿ ಕುರಿತು ವಿವರವಾದ ವರದಿಯನ್ನು ಇಂದು ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ.
ದರ್ಶನ್ಗೆ ಪ್ರತಿನಿತ್ಯ ಫಿಸಿಯೋಥೆರಪಿ ನೀಡಲಾಗುತ್ತಿದೆಯೇ? ಬೆನ್ನುನೋವಿನ ಸಮಸ್ಯೆ ಯಾವ ಹಂತದಲ್ಲಿದೆ? ಜೈಲಿನಲ್ಲಿಯೇ ಅಗತ್ಯ ವೈದ್ಯಕೀಯ ಚಿಕಿತ್ಸೆ ಲಭ್ಯವಿದೆಯೇ? ಎಂಬ ಪ್ರಮುಖ ಅಂಶಗಳು ವರದಿಯಲ್ಲಿ ಉಲ್ಲೇಖವಾಗುವ ನಿರೀಕ್ಷೆಯಿದೆ.
ಒಂದು ವೇಳೆ ಜೈಲಿನಲ್ಲಿ ಅಗತ್ಯ ಚಿಕಿತ್ಸೆ ಲಭ್ಯವಿಲ್ಲದಿದ್ದರೆ ಸರ್ಕಾರಿ ಆಸ್ಪತ್ರೆ ಅಥವಾ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಸಂಸ್ಥೆಗೆ ಕಳುಹಿಸುವಂತೆಯೂ ನ್ಯಾಯಾಲಯ ಸೂಚಿಸಿತ್ತು. ಇಂದು ಸಲ್ಲಿಕೆಯಾಗುವ ವರದಿಯನ್ನು ಪರಿಶೀಲಿಸಿದ ಬಳಿಕ ಅಗತ್ಯವಿದ್ದರೆ ಸ್ವತಂತ್ರ ವೈದ್ಯಕೀಯ ಮಂಡಳಿಯ ಅಭಿಪ್ರಾಯ ಪಡೆಯುವ ಬಗ್ಗೆಯೂ ನ್ಯಾಯಾಲಯ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ಸಾಕ್ಷಿ ಪುನೀತ್ ಕ್ರಾಸ್ ಎಕ್ಸಾಮಿನೇಷನ್ ಮತ್ತೆ ಆರಂಭ
ಇನ್ನೊಂದೆಡೆ, ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಸಾಕ್ಷಿ ಪುನೀತ್ ಅವರ ಕ್ರಾಸ್ ಎಕ್ಸಾಮಿನೇಷನ್ ಇಂದಿನಿಂದ ಮತ್ತೆ ಆರಂಭವಾಗಲಿದೆ.
ಪ್ರಮುಖ ಸಾಕ್ಷ್ಯ ನುಡಿಯುವ ಸಂದರ್ಭದಲ್ಲಿ ಪುನೀತ್ ಈ ಹಿಂದೆ ನೀಡಿದ್ದ ಹೇಳಿಕೆಗಳಿಗೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಪ್ರತಿಕೂಲ ಸಾಕ್ಷಿ ಎಂದು ಪರಿಗಣಿಸುವಂತೆ ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ಮನವಿ ಮಾಡಿತ್ತು.
ಪುನೀತ್ ಅವರ ಹೇಳಿಕೆಗಳಲ್ಲಿನ ವ್ಯತ್ಯಾಸಗಳ ಹಿನ್ನೆಲೆಯಲ್ಲಿ ಪ್ರಾಸಿಕ್ಯೂಷನ್ ಪರ ವಿಶೇಷ ಸರ್ಕಾರಿ ಅಭಿಯೋಜಕ (ಎಸ್ಪಿಪಿ) ಪ್ರಸನ್ನ ಕುಮಾರ್ ಇಂದು ಮತ್ತೆ ಕ್ರಾಸ್ ಎಕ್ಸಾಮಿನೇಷನ್ ನಡೆಸಲಿದ್ದಾರೆ.
ವಿಶೇಷವಾಗಿ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ಮುಂದೆ ಸಿಆರ್ಪಿಸಿ ಸೆಕ್ಷನ್ 164ರ ಅಡಿಯಲ್ಲಿ ಪುನೀತ್ ನೀಡಿದ್ದ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ಪ್ರಶ್ನೆಗಳನ್ನು ಕೇಳಲಿದ್ದಾರೆ ಎಂದು ತಿಳಿದುಬಂದಿದೆ.









