ಬೆಂಗಳೂರು: 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಎಂ.ಎಸ್. ಉಮೇಶ್ ಅವರು ಕೊನೆಯುಸಿರು ಎಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿಧನರಾಗಿದ್ದಾರೆ. ಇನ್ನೂ ಅವರ ಅಗಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯನಟ ಉಮೇಶ್ ಅವರ ನಿಧನದ ಸುದ್ದಿ ನೋವು ತಂದಿದೆ.
ತಮ್ಮ ಸಹಜ ಅಭಿನಯದ ಮೂಲಕ ಹಲವು ದಶಕಗಳ ಕಾಲ ಪ್ರೇಕ್ಷಕರನ್ನು ನಗಿಸುತ್ತಾ, ಕನ್ನಡಾಂಬೆಯ ಸೇವೆಗೈದ ಹಿರಿಯ ಜೀವಕ್ಕೆ ಭಾವಪೂರ್ಣ ವಿದಾಯಗಳು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಅಭಿಮಾನಿಗಳು, ಆಪ್ತರು ಮತ್ತು ಚಿತ್ರರಂಗದವರು ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಕುಟುಂಬದವರು ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. 1960ರಿಂದಲೂ ಚಿತ್ರರಂಗದಲ್ಲಿ ಉಮೇಶ್ ಅವರು ಸಕ್ರಿಯರಾಗಿದ್ದರು. ಅವರ ಜೊತೆಗಿನ ಒಡನಾಟವನ್ನು ನೆನಪು ಮಾಡಿಕೊಂಡು ಸೆಲೆಬ್ರಿಟಿಗಳು ಕಂಬನಿ ಮಿಡಿಯುತ್ತಿದ್ದಾರೆ.


