ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಭೇಟಿ ಮಾಡಿ, ಅವರ ಸಮಸ್ಯೆಗಳನ್ನು ಆಲಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ರಮ್ಯಾ, ಕಾರ್ಯಕರ್ತೆಯರೊಂದಿಗೆ ಆತ್ಮೀಯವಾಗಿ ಮಾತನಾಡಿ ಅವರ ಅಹವಾಲುಗಳನ್ನು ಆಲಿಸಿದರು. ಈ ವೇಳೆ ತಾಯಿಯೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪುಟಾಣಿ ಮಗುವೊಂದರೊಂದಿಗೆ ಪ್ರೀತಿಯಿಂದ ಮಾತನಾಡಿಸಿ, ಮಗುವಿನ ಪರಿಸ್ಥಿತಿ ಕಂಡು ಬೇಸರ ವ್ಯಕ್ತಪಡಿಸಿದರು.
ನಂತರ ವೇದಿಕೆಯಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು ಇಂತಹ ಪರಿಸ್ಥಿತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದನ್ನು ಕಂಡು ನೋವಾಗುತ್ತಿದೆ ಎಂದರು. ತಾಯಿಯೇ ಪ್ರತಿಭಟನೆಯಲ್ಲಿ ಕುಳಿತಿರುವಾಗ ಮಗು ಶಾಲೆಗೆ ಹೋಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿ, ಕಾರ್ಯಕರ್ತೆಯರ ಕುಟುಂಬಗಳು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಆರೋಗ್ಯ ಸಚಿವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದ ರಮ್ಯಾ, ಅವರ ಕೆಲಸದ ಮಹತ್ವವನ್ನು ಸರ್ಕಾರವೂ ಗುರುತಿಸಿದೆ ಎಂದು ಹೇಳಿದರು. ‘ನಮ್ಮ ಸರ್ಕಾರ ನಿಮಗೆ ಖಂಡಿತ ಒಳ್ಳೆಯದನ್ನೇ ಮಾಡುತ್ತದೆ. ಆದಷ್ಟು ಬೇಗ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ’ ಎಂದು ಭರವಸೆ ನೀಡಿದರು.









