ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸ್ಥಿತಿಗತಿಯ ಸಮರ್ಪಕವಾಗಿ ಯಾವುದೇ ತೊಂದರೆಯಾಗದಂತೆ ನಿರ್ವಹಿಸಬೇಕು. ಕುಡಿಯುವ ನೀರು, ಮೇವಿನ ಸ್ಥಿತಿಗತಿ ಮತ್ತು ಬರನಿರ್ವಹಣೆ ಸಂಬಂಧಿಸಿದಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯನಿರ್ವಹಿಸಬೇಕು.
ಅಗತ್ಯವಿರುವ ಪ್ರದೇಶಗಳಲ್ಲಿ ಜಿಪಿಎಸ್ ಅಳವಡಿಸಿರುವ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರಿನ ತೊಂದರೆಗೊಳಗಾದ ಗ್ರಾಮಗಳನ್ನು ಈಗಾಗಲೇ ಗುರುತಿಸಿದ್ದು, ಯಾವುದೇ ಕಾರಣಕ್ಕೂ ಜಿಲ್ಲೆಯ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಜರುಗಿಸಬೇಕೆಂದು ತಿಳಿಸಿದರು.
ಮುಂಬರುವ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಹೀಟ್ ವೇವ್ ಸ್ಟ್ರೋಕ್ ನಿಂದಾಗಿ (ಶಾಖದ ಹೊಡೆತ) ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ/ಛತ್ರಿ ಬಳಸುವುದಲ್ಲದೆ, ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಿಸಬೇಕು. ಬಿಸಿ ಗಾಳಿ ಹಾಗೂ ಅತಿಯಾದ ತಾಪಮಾನದಿಂದ ಆರೋಗ್ಯ ಸಮಸ್ಯೆ ಉಂಟಾದಲ್ಲಿ ಸಮೀಪದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸುರೇಖಾ, ಜಿ.ಪಂ. ಮುಖ್ಯ ಯೋಜನಾಧಿಕಾರಿ ನಿರ್ಮಲಾ, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ತಹಸೀಲ್ದಾರರು, ಪಿಡಿಓಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಉತ್ತಮ ಗುಣಮಟ್ಟದ ಖಾಸಗಿ ಬೋರ್‌ವೆಲ್‌ಗಳಿಂದ ಪೈಪ್‌ಲೈನ್ ಮೂಲಕ ನೀರು ಸರಬರಾಜು ಮಾಡಲು ಕ್ರಮ ವಹಿಸಬೇಕು. ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ನೀರು ಆವಿಯಾಗುತ್ತಿರುವ ಪ್ರಮಾಣ ಹೆಚ್ಚಿದೆ. ಸಾರ್ವಜನಿಕರು ನೀರನ್ನು ಪೋಲು ಮಾಡದೇ ಮಿತವಾಗಿ ಬಳಸಬೇಕು. ನದಿ ತೀರದ ರೈತರು ಪಂಪ್‌ಸೆಟ್ ಮೂಲಕ ನೀರೆತ್ತದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ಕುರಿತು ಅಧಿಕಾರಿಗಳು ನಿಷ್ಕಾಳಜಿ ವಹಿಸದೇ ಕಾರ್ಯಪ್ರವೃತ್ತರಾಗಬೇಕು. ಸಮರ್ಪಕವಾಗಿ ಮೇವಿನ ದಾಸ್ತಾನು ಮಾಡಿಟ್ಟುಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಭೆಯಲ್ಲಿ ಆದೇಶಿಸಿದರು.