ವಿಜಯಸಾಕ್ಷಿ ಸುದ್ದಿ, ಗದಗ: ಮಡಿವಾಳ ಮಾಚಿದೇವರು 12ನೇ ಶತಮಾನದ ಪ್ರಸಿದ್ಧ ವಚನಕಾರರು. ತಮ್ಮ ಕಾಯಕ ನಿಷ್ಠೆಯಿಂದ ಹಾಗೂ ವಚನಗಳ ಮೂಲಕ ಸಮಾಜದಲ್ಲಿ ತಾರತಮ್ಯ, ಅಂಕು-ಡೊಂಕುಗಳನ್ನು ತಿದ್ದಿ ಸಮಾಜ ಸುಧಾರಣೆಗಾಗಿ ಶ್ರಮಿಸಿದ್ದಾರೆ. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಸೋಮವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಡಿವಾಳ ಮಾಚಿದೇವರು ಜಗಜ್ಯೋತಿ ಬಸವಣ್ಣನವರ ತತ್ವಗಳಿಂದ ಪ್ರೇರಿತರಾದವರು. ಸಮಾಜದಲ್ಲಿ ಸಮಾನತೆಗಾಗಿ ತಮ್ಮ ವಚನಗಳ ಮೂಲಕ ಹೋರಾಡಿದವರು. ಶರಣರ ಬಟ್ಟೆಗಳನ್ನು ಮಡಿ ಮಾಡುವುದು ಇವರ ಕಾಯಕವಾಗಿತ್ತು. ಕಾಯಕನಿಷ್ಠ, ಸದಾಚಾರವುಳ್ಳವರ ಶಿವಶರಣರ ಬಟ್ಟೆಗಳನ್ನು ಮಾತ್ರ ಮಡಿ ಮಾಡುವ ನಿಷ್ಠುರ ವಚನಕಾರರಾಗಿದ್ದರು. ಇವರ ವಚನಗಳಲ್ಲಿನ ಸಂದೇಶಗಳು ಸಾರ್ವಕಾಲಿಕವಾಗಿವೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ಇದೇ ಸಂದರ್ಭದಲ್ಲಿ ಸಮಾಜದ ಹಿರಿಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಡಿವೈಎಸ್ಪಿ ವಿದ್ಯಾಧರ ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ, ರಾಜು ಕಂಠಿಗೊಣ್ಣವರ, ಶ್ರೀಧರ ಚಿನಗುಂಡಿ ಸೇರಿದಂತೆ ಸಮಾಜದ ಗಣ್ಯರು, ಹಿರಿಯರು, ಪ್ರಮುಖರು ಹಾಜರಿದ್ದರು.
ನಾಡಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಪ್ರೊ. ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಶಿರಗುಂಪಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಸುಜಾತಾ ಮಡಿವಾಳರ ಉಪನ್ಯಾಸ ನೀಡಿ, ಮಡಿವಾಳ ಮಾಚಿದೇವರು ವೀರನಿಷ್ಠೆಯ ಶರಣರಾಗಿದ್ದರು. ವಿಜಾಪುರ ಜಿಲ್ಲೆಯ ಸಿಂಧಗಿ ತಾಲೂಕಿನ ದೇವರ ಹಿಪ್ಪರಗಿಯಲ್ಲಿ ಪರ್ವತಯ್ಯ – ಸುಜ್ಞಾನವ್ವ ದಂಪತಿಗಳ ಪುತ್ರರಾಗಿ ಜನಿಸಿದರು. ಕಲ್ಯಾಣ ಇವರ ಕಾರ್ಯಕ್ಷೇತ್ರವಾಗಿತ್ತು. ಆರಾಧ್ಯದೈವ ಕಲ್ಲಿನಾಥವಾಗಿದ್ದು, ಕಾವ್ಯ ಪುರಾಣಗಳಲ್ಲಿ ಇವರನ್ನು ವೀರಭದ್ರನ ಅವತಾರವೆಂದು ಬಣ್ಣಿಸಲಾಗಿದೆ. ಶರಣರ ಬಟ್ಟೆಗಳನ್ನು ಶುಚಿ ಮಾಡುವುದು ಇವರ ಕಾಯಕವಾಗಿತ್ತು. ಇವರು ತಮ್ಮ ವಚನಗಳ ಮೂಲಕ ಸಮಾಜದಲ್ಲಿ ಅಸ್ಪೃಶ್ಯತೆ, ಅಂಧಕಾರ, ಮೂಢನಂಬಿಕೆ, ಅನಾಚಾರಗಳನ್ನು ಹೋಗಲಾಡಿಸಿ ಸಮಾಜ ಸುಧಾರಣೆಗಾಗಿ ಶ್ರಮಿಸಿದರು ಎಂದು ತಿಳಿಸಿದರು.



