ಬೆಂಗಳೂರು:- ರಾಜ್ಯದಲ್ಲಿ ದರೋಡೆ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ.
ಸೋಮವಾರ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಹಲಸಂಗಿ ಗ್ರಾಮದಲ್ಲಿನ ಭೂಮಿಕಾ ಜ್ಯುವೆಲರಿ ಅಂಗಡಿಗೆ ನುಗ್ಗಿದ ದರೋಡೆಕೋರರು ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಇದರ ಬೆನ್ನಲ್ಲೇ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಮತ್ತೊಂದು ದರೋಡೆ ಘಟನೆ ನಡೆದಿದೆ.
ನೆಲಮಂಗಲದ ರಾಮ್ದೇವ್ ಜ್ಯುವೆಲ್ಲರಿ ಅಂಗಡಿಗೆ ಬೈಕ್ನಲ್ಲಿ ಬಂದಿದ್ದ ಇಬ್ಬರು ದರೋಡೆಕೋರರು, ಗನ್ ತೋರಿಸಿ ಅಂಗಡಿಗೆ ನುಗ್ಗಿದ್ದಾರೆ. ಬಳಿಕ ಅಂಗಡಿಯಲ್ಲಿ ಲಭ್ಯವಿದ್ದ ಚಿನ್ನಾಭರಣಗಳನ್ನು ದೋಚಿಕೊಂಡು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ. ಈ ದರೋಡೆಕೋರರ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ದರೋಡೆಕೋರರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.



