ಹಾವೇರಿ: ತಮಿಳುನಾಡಿನಿಂದ ಬೆಳಗಾವಿಗೆ ತೆರಳುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ನಲ್ಲಿ ಹಾರಾಟದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಾಮನಹಳ್ಳಿ ಗ್ರಾಮದ ಬಳಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.

ZD 4050 ಸಂಖ್ಯೆಯ ವಾಯುಪಡೆಯ ಹೆಲಿಕಾಪ್ಟರ್ ತಮಿಳುನಾಡಿನ ಸೋಲೂರಿನಿಂದ ಬೆಳಗಾವಿಗೆ ಪ್ರಯಾಣಿಸುತ್ತಿತ್ತು. ಸಂಜೆ ವೇಳೆಗೆ ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದಲ್ಲಿರುವ ಕಾಮನಹಳ್ಳಿ ಗ್ರಾಮದ ರೈತರೊಬ್ಬರ ಹೊಲದಲ್ಲಿ ಪೈಲಟ್ ಹೆಲಿಕಾಪ್ಟರ್ ಅನ್ನು ಸುರಕ್ಷಿತವಾಗಿ ಇಳಿಸಿದ್ದಾರೆ.
ಹೆಲಿಕಾಪ್ಟರ್ನಲ್ಲಿದ್ದ ವಾಯುಪಡೆಯ ದೀಪಕ್ ಶರ್ಮಾ ಸೇರಿದಂತೆ ಒಟ್ಟು ಆರು ಮಂದಿ ಸುರಕ್ಷಿತವಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್ ಆಗಿರುವ ಸುದ್ದಿ ತಿಳಿಯುತ್ತಿದ್ದಂತೆ ಕಾಮನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದರು. ಮಾಹಿತಿ ತಿಳಿದ ಶಿಗ್ಗಾಂವಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಹೆಲಿಕಾಪ್ಟರ್ ಸುತ್ತಲೂ ಭದ್ರತೆ ಒದಗಿಸಲಾಗಿದ್ದು, ಮುಂದಿನ ತಾಂತ್ರಿಕ ಪರಿಶೀಲನೆಗಾಗಿ ವಾಯುಪಡೆಯ ತಾಂತ್ರಿಕ ತಂಡಕ್ಕೆ ಮಾಹಿತಿ ರವಾನಿಸಲಾಗಿದೆ.










