ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಬಾಲಿವುಡ್ ನಟಿ ಆಲಿಯಾ ಭಟ್ ಬೆಂಬಲ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ವಿದ್ಯಾರ್ಥಿಗಳ ಹೋರಾಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಆಲಿಯಾ ಭಟ್ ತಮ್ಮ ಪೋಸ್ಟ್ನಲ್ಲಿ, ಇತ್ತೀಚಿನ ಬೆಳವಣಿಗೆಗಳನ್ನು ನೋಡಿದಾಗ ಬೇಸರವಾಗುತ್ತಿದೆ ಎಂದು ಹೇಳಿದ್ದು, ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ತೋರಿಸುತ್ತಿರುವ ಧೈರ್ಯ ಮತ್ತು ಭರವಸೆ ಪ್ರೇರಣಾದಾಯಕವಾಗಿದೆ ಎಂದು ತಿಳಿಸಿದ್ದಾರೆ.
ಪ್ರತಿಯೊಬ್ಬ ವಿದ್ಯಾರ್ಥಿಯ ಹಿಂದೆ ಒಂದು ಕನಸು, ಕುಟುಂಬದ ನಿರೀಕ್ಷೆ ಹಾಗೂ ಹಲವು ವರ್ಷಗಳ ಪರಿಶ್ರಮ ಇರುತ್ತದೆ. ಅವರು ತಮ್ಮ ಸ್ವಂತ ಭವಿಷ್ಯಕ್ಕಾಗಿ ಮಾತ್ರವಲ್ಲದೆ, ಮುಂದಿನ ಪೀಳಿಗೆಯ ವಿದ್ಯಾರ್ಥಿಗಳಿಗೆ ಉತ್ತಮ ವ್ಯವಸ್ಥೆ ಸಿಗಬೇಕು ಎಂಬ ಉದ್ದೇಶದಿಂದ ಹೋರಾಟ ನಡೆಸುತ್ತಿದ್ದಾರೆ ಎಂದು ಆಲಿಯಾ ಹೇಳಿದ್ದಾರೆ.
“ವಿದ್ಯಾರ್ಥಿಗಳ ಧೈರ್ಯ ನನಗೆ ಪ್ರೇರಣೆ ನೀಡಿದೆ. ದೇಶದ ಭವಿಷ್ಯ ರೂಪಿಸುವ ಯುವಕರ ಮಾತನ್ನು ನಾವು ನಿಜವಾಗಿಯೂ ಕೇಳುತ್ತಿದ್ದೇವೆಯೇ ಎಂಬ ಪ್ರಶ್ನೆಯನ್ನು ಎಲ್ಲರೂ ಕೇಳಿಕೊಳ್ಳಬೇಕು. ಭವಿಷ್ಯ ಅವರದ್ದು” ಎಂದು ಆಲಿಯಾ ಭಟ್ ತಮ್ಮ ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸಬೇಕು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿದ್ದಾರೆ. ಈ ಪ್ರತಿಭಟನೆಗೆ ವಿವಿಧ ಕ್ಷೇತ್ರಗಳ ಗಣ್ಯರಿಂದ ಬೆಂಬಲ ವ್ಯಕ್ತವಾಗುತ್ತಿದೆ.



