ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಎಲ್ಲ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಕೇಂದ್ರಗಳಲ್ಲಿ ಪರೀಕ್ಷೆಗಳು ಸುಗಮವಾಗಿ ಹಾಗೂ ಶಿಸ್ತಿನಿಂದ ನಡೆಯುವಂತೆ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ. ಪರೀಕ್ಷೆಗಳು ಯಶಸ್ವಿಯಾಗಿ ಜರುಗಲು ಅಗತ್ಯ ವ್ಯವಸ್ಥೆಯನ್ನು ಎಲ್ಲಾ ಕೇಂದ್ರಗಳಲ್ಲಿ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದ್ದಾರೆ.
ಗದಗ ಜಿಲ್ಲೆಯಲ್ಲಿ ಒಟ್ಟು 61 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟಾರೆ 16458 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಯಾವುದೇ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಕೇಂದ್ರಗಳು ಇರುವುದಿಲ್ಲ. ರಾಜ್ಯ ಹಾಗೂ ಜಿಲ್ಲಾ ಹಂತದಿಂದ ವೀಕ್ಷಕರನ್ನು ನೇಮಿಸಲಾಗಿದೆ. 61 ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತಾ ವ್ಯವಸ್ಥೆ, ಮಾರ್ಗಾಧಿಕಾರಿಗಳಿಗೆ ಎಸ್ಕಾರ್ಟ್ ವ್ಯವಸ್ಥೆ, ಜಿಲ್ಲಾ ಹಂತದಲ್ಲಿ ಉತ್ತರ ಪತ್ರಿಕೆಗಳ ಸಂಗ್ರಹಣಾ (ಸ್ಟ್ರಾಂಗ್ ರೂಮ್) ಕೊಠಡಿಗೆ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 144 ಕಲಂ ಅನ್ವಯ ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ.
ಜಿಲ್ಲಾ ಹಂತದಲ್ಲಿ ಸಿಸಿಟಿವಿ ವೆಬ್ ಕಾಸ್ಟಿಂಗ್ ವೀಕ್ಷಣೆ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳ ಅನುಕೂಲತೆಗಳಿಗಾಗಿ ಸಾರಿಗೆ ಸೌಲಭ್ಯ, ಆರೋಗ್ಯ ಮತ್ತು ತುರ್ತು ವೈದ್ಯಕೀಯ ಸಹಾಯದ ವ್ಯವಸ್ಥೆ ಕೈಗೊಳ್ಳಲಾಗಿದೆ. ಒತ್ತಡ ರಹಿತ ವಾತಾವರಣದಲ್ಲಿ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಜಾಗೃತಿ ಮೂಡಿಸಲಾಗಿದೆ.
ಪರೀಕ್ಷೆಗಳು ಶಿಸ್ತಿನಿಂದ ನಡೆಯುವಂತೆ ಮೇಲ್ವಿಚಾರಣೆಗಾಗಿ ಸಿಟ್ಟಿಂಗ್ ಸ್ಕ್ವಾಡ್, ಫ್ಲೈಯಿಂಗ್ ಸ್ಕ್ವಾಡ್, ಮಾರ್ಗಾಧಿಕಾರಿಗಳು, ಕೊಠಡಿ ಮೇಲ್ವಿಚಾರಕರು ಹಾಗೂ ಮೊಬೈಲ್ ಸ್ವಾಧೀನ ಅಧಿಕಾರಿಗಳನ್ನು ನೇಮಿಸಿ ಅಗತ್ಯ ತರಬೇತಿ ನೀಡಲಾಗಿದೆ. ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಬೇರೆ ಸಿಬ್ಬಂದಿ / ಅಧಿಕಾರಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ತಗೆದುಕೊಂಡು ಹೋಗಲು ಅವಕಾಶವಿರುವುದಿಲ್ಲ. ಪರಿಕ್ಷಾ ಕೇಂದ್ರÀಗಳಲ್ಲಿ ಪ್ರತಿ ವಿದ್ಯಾರ್ಥಿಗಳಿಗೆ ಸೂಕ್ತ ಆಸನ (ಡೆಸ್ಕ್) ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲಯ ವ್ಯವಸ್ಥೆ ಇರುವಂತೆ ನೋಡಿಕೊಳ್ಳುವಂತೆ ಅಧಿಕಾರಿಗಳು ಹಾಗೂ ಮುಖ್ಯ ಅಧೀಕ್ಷಕರಿಗೆ ಸಭೆ ಮಾಡಿ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದ್ದಾರೆ.