ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪಟ್ಟಣದ ಜನತೆಯ ಬಹುದಿನಗಳ ಕನಸಾಗಿದ್ದ 100 ಹಾಸಿಗೆಗಳ ತಾಲೂಕು ಆಸ್ಪತ್ರೆ ನಿರ್ಮಾಣ ಕಾಮಗಾರಿ ಅಂತಿಮ ಹಂತ ತಲುಪಿದ್ದು, ಶೀಘ್ರದಲ್ಲೇ ಉದ್ಘಾಟನೆಗೆ ಸಜ್ಜಾಗಿದೆ. 2024-25ನೇ ಸಾಲಿನ ನಬಾರ್ಡ್ (RIDF) ಯೋಜನೆಯಡಿ ₹32.97 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಆಸ್ಪತ್ರೆ ತಾಲೂಕಿನ ಆರೋಗ್ಯ ಸೇವೆಗೆ ಹೊಸ ಆಯಾಮ ನೀಡಲಿದೆ.
ಈ ಆಸ್ಪತ್ರೆಯಲ್ಲಿ 11 ಮಂದಿ ತಜ್ಞ ವೈದ್ಯರ ಹುದ್ದೆಗಳು, ತುರ್ತು ಚಿಕಿತ್ಸಾ ವಿಭಾಗಕ್ಕೆ ಪ್ರತ್ಯೇಕ ವೈದ್ಯರು, ಮಾಡ್ಯುಲರ್ ಆಪರೇಷನ್ ಥಿಯೇಟರ್, ಸೆಪ್ಟಿಕ್ ಹಾಗೂ ಮೈನರ್ ಓಟಿ, ಡಯಾಲಿಸಿಸ್ ಘಟಕ, ಎಕ್ಸ್-ರೇ, ಪ್ರತಿ ವಿಭಾಗಕ್ಕೂ ಓಪಿಡಿ, ಎನ್ಸಿಡಿ ಘಟಕ, ಕಣ್ಣಿನ ಸಲಹಾ ಕೇಂದ್ರ, ಎಚ್ಐವಿ ಹಾಗೂ ಕ್ಷಯರೋಗ ಘಟಕ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ವೈದ್ಯರು ಮತ್ತು ಸಿಬ್ಬಂದಿಗೆ ಪ್ರತ್ಯೇಕ ವಸತಿ ವ್ಯವಸ್ಥೆಯೂ ಇರಲಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್.ಎಸ್. ನೀಲಗುಂದ ಪ್ರತಿಕ್ರಿಯಿಸಿ, ಆಸ್ಪತ್ರೆ ಕಟ್ಟಡದ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಉದ್ಘಾಟನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ವೈದ್ಯನಾಗಿ ಸೇವೆ ಸಲ್ಲಿಸುತ್ತಿದ್ದಾಗಲೇ ಆಸ್ಪತ್ರೆಗೆ ಜಾಗೆ ಗುರುತಿಸುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದೆ. ಶಾಸಕನಾದ ಬಳಿಕ ಅನುದಾನ ತಂದು ಕಾಮಗಾರಿಯನ್ನು ಪೂರ್ಣಗೊಳಿಸುವ ಅವಕಾಶ ದೊರೆತಿರುವುದು ನನ್ನ ಸಾರ್ವಜನಿಕ ಜೀವನದ ಸೌಭಾಗ್ಯವಾಗಿದೆ ಎಂದು ಹೇಳಿದರು.
ಡಿ.ಕೆ. ಶಿವಕುಮಾರ್ ಅಭಿಮಾನಿ ಬಳಗದ ಜಿಲ್ಲಾ ಕಾರ್ಯಾಧ್ಯಕ್ಷ ಮಹಾಂತೇಶ ದಶಮನಿ ಮಾತನಾಡಿ, ಶಿರಹಟ್ಟಿ ತಾಲೂಕಿನ ಜನರ ಬಹುದಿನಗಳ ಕನಸು ನನಸಾಗುತ್ತಿದ್ದು, ಆಸ್ಪತ್ರೆಯಲ್ಲಿ ಎಲ್ಲ ಹಂತದ ಆರೋಗ್ಯ ಸೇವೆಗಳು ನಿರಂತರವಾಗಿ ಲಭ್ಯವಾಗುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.



