ಬೆಂಗಳೂರು: ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರು ಹಾಗೂ ಲಿಂಗಾಯತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ, ಲೇಖಕ ರವಿ ಹಂಜ್ ಅವರ ‘ಬಸವಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಬಿ. ಖಂಡ್ರೆ ಆಗ್ರಹಿಸಿದ್ದಾರೆ. ಅಲ್ಲದೆ, ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರುವ ವಿಡಿಯೋಗಳನ್ನು ಕೂಡಲೇ ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಚಿವನಾಗಿ ಒಂದು ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಬಹಿರಂಗವಾಗಿ ಒತ್ತಾಯಿಸುವುದು ಸೂಕ್ತವಲ್ಲ ಎಂಬ ಅರಿವು ತನಗಿದೆ. ಆದರೂ, ಇಡೀ ಲಿಂಗಾಯತ ಸಮುದಾಯ ಹಾಗೂ ವಿಶ್ವಗುರು ಬಸವಣ್ಣನವರ ಅನುಯಾಯಿಗಳಿಗೆ ನೋವುಂಟು ಮಾಡುವಂತಹ ಆಧಾರರಹಿತ ಆರೋಪಗಳನ್ನು ಕೃತಿಯಲ್ಲಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇಂತಹ ಬರಹಗಳು ಸಮಾಜದ ಸ್ವಾಸ್ಥ್ಯವನ್ನು ಕದಡುವ ಸಾಧ್ಯತೆ ಇರುವುದರಿಂದ ಕೃತಿಯನ್ನು ಕೂಡಲೇ ಮುಟ್ಟುಗೋಲು ಹಾಕಿಕೊಳ್ಳುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ಅವಹೇಳನ ಸಹಿಸಲಾಗದು
ಸಂವಿಧಾನ ನೀಡಿರುವ ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ತಾವು ಗೌರವ ನೀಡುವುದಾಗಿ ಈಶ್ವರ ಖಂಡ್ರೆ ಹೇಳಿದ್ದಾರೆ. ಆದರೆ ಬಸವಣ್ಣನವರನ್ನು ಕೊಲೆಗಡುಕ, ದರೋಡೆಕೋರ ಎಂದು ಬಿಂಬಿಸುವುದು ಹಾಗೂ ಬಿಜ್ಜಳನ ಖಜಾನೆಯನ್ನು ದುರುಪಯೋಗಪಡಿಸಿಕೊಂಡು ಶರಣ ದಾಸೋಹ ಮಾಡಿದ್ದರು ಎಂಬಂತಹ ಹೇಳಿಕೆಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೀಗಾಗಿ ‘ಬಸವಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದರ ಜೊತೆಗೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ರವಿ ಹಂಜ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ರವಿ ಹಂಜ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣಕ್ಕೆ ಒತ್ತಾಯ
ಲಿಂಗಾಯತ ಸಮುದಾಯವನ್ನು ‘ಲಿಂಗಾಹತರು’ ಎಂದು ಉಲ್ಲೇಖಿಸಿರುವುದು ಪ್ರಚೋದನಕಾರಿ ಹೇಳಿಕೆಯಾಗಿದೆ ಎಂದು ಖಂಡ್ರೆ ಆರೋಪಿಸಿದ್ದಾರೆ. ಇಂತಹ ಹೇಳಿಕೆಗಳು ವಿಶ್ವದಾದ್ಯಂತ ಇರುವ ಬಸವಣ್ಣನವರ ಅನುಯಾಯಿಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದು, ಲಿಂಗಾಯತ ಸಮುದಾಯದವರಿಗೂ ನೋವು ತಂದಿವೆ ಎಂದು ಹೇಳಿದ್ದಾರೆ.
ಸಂಶೋಧನೆಯ ಆಧಾರವಿಲ್ಲದೆ ಭಾವನಾತ್ಮಕ ಹಾಗೂ ಧಾರ್ಮಿಕ ವಿಚಾರಗಳ ಕುರಿತು ಹೇಳಿಕೆ ನೀಡುತ್ತಿರುವ ರವಿ ಹಂಜ್ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು. ಅಲ್ಲದೆ, ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಈಶ್ವರ ಖಂಡ್ರೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.








