ಬೆಂಗಳೂರು:- ಲೋಕಾಯುಕ್ತ ಎಡಿಜಿಪಿಗೆ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಕುಮಾರಸ್ವಾಮಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಎಡಿಜಿಪಿ ಚಂದ್ರಶೇಖರ್ ದೂರಿನ ಮೇರೆಗೆ ಬೆಂಗಳೂರಿನ ಸಂಜಯ್‌ನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈ ಪ್ರಕರಣ ರದ್ದು ಕೋರಿ ಕುಮಾರಸ್ವಾಮಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,
ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ. ಈ ಮೂಲಕ ಪುತ್ರನ ಉಪಚುನಾವಣೆ ಮಧ್ಯ ಈ ಎಫ್ಐಆರ್ ಟೆನ್ಷನ್ ನಲ್ಲಿದ್ದ ಕುಮಾರಸ್ವಾಮಿಗೆ ಈಗ ಮಧ್ಯಂತರ ರಿಲೀಫ್ ಸಿಕ್ಕಂತಾಗಿದೆ.
ಪ್ರಕರಣ ರದ್ದು ಕೋರಿ ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸುರೇಶ್ ಬಾಬು ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಪೊಲೀಸರನ್ನು ಕಳಿಸಿ ಬಂಧಿಸಲು ಯತ್ನಿಸುತ್ತಿದ್ದಾರೆ.
10 ವರ್ಷದ ಹಿಂದಿನ ನಿರೀಕ್ಷಣಾ ಜಾಮೀನು ರದ್ದುಪಡಿಸಲು ಯತ್ನಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಪರ ಹಿರಿಯ ವಕೀಲ ಹಷ್ಮತ್ ಪಾಷಾ ವಾದ ಮಂಡಿಸಿದರು.
ಈ ವಾದ ಆಲಿಸಿದ ಹೈಕೋರ್ಟ್, ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ. ಅಲ್ಲದೇ ಎಫ್ಐಆರ್ ಆಧರಿಸಿ ಹಳೆಯ ನಿರೀಕ್ಷಣಾ ಜಾಮೀನು ರದ್ದುಪಡಿಸುವಂತಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ನಿರ್ಬಂಧಿಸಿದೆ.