ಬೆಂಗಳೂರು: ನಟ ಚೇತನ್ ಅಹಿಂಸಾ ನೀಡಿದ ದೂರಿನ ಆಧಾರದ ಮೇಲೆ ಸಿನಿಮಾ ನಿರ್ಮಾಪಕ ಸಾ.ರಾ ಗೋವಿಂದು ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆದರಿಕೆ ಹಾಕಿದ ಆರೋಪ ಹಾಗೂ ಮನೆ ಮುಂದೆ ಗಲಾಟೆ ನಡೆಸಿದ ಹಿನ್ನೆಲೆಯಲ್ಲಿ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಾ.ರಾಜ್‌ಕುಮಾರ್ ಸಮಾಧಿ ಜಾಗದ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ನಟ ಚೇತನ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಕೆಲವರು ಮನೆಗೆ ಬಂದು ಗಲಾಟೆ ನಡೆಸಿದ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ನಟ ಚೇತನ್ ಅಹಿಂಸಾ ಅವರು ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ದೂರು ನೀಡಿ, ಸಾ.ರಾ ಗೋವಿಂದು, ಶಿವರಾಮೇಗೌಡ ಹಾಗೂ ಶಿವಕುಮಾರ್ ನಾಯ್ಕ್ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ದೂರು ನೀಡಿದ ಬಳಿಕ ಪ್ರತಿಕ್ರಿಯಿಸಿದ ಚೇತನ್, “ಕಳೆದ ಶನಿವಾರ ಸಾ.ರಾ ಗೋವಿಂದು ಅವರು ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದರು. ಅವರ ವರ್ತನೆ ಗೂಂಡಾಗಿರಿಯಂತಿತ್ತು. ಈ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಸಾಕ್ಷ್ಯಾಧಾರಗಳೊಂದಿಗೆ ದೂರು ನೀಡಲಾಗಿದೆ,” ಎಂದು ತಿಳಿಸಿದ್ದಾರೆ.



