ಬೆಂಗಳೂರು: ಉತ್ತರ ತಾಲೂಕಿನ ಶೆಟ್ಟಿಹಳ್ಳಿಯಲ್ಲಿರುವ ಪ್ರತಿಷ್ಠಿತ ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್‌ನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಆರೋಪ ಕೇಳಿಬಂದಿದೆ.
ಸುಮಾರು 700 ಫ್ಲಾಟ್‌ಗಳಿರುವ ಈ ಅಪಾರ್ಟ್‌ಮೆಂಟ್‌ನ ಅಸೋಸಿಯೇಷನ್ ಸದಸ್ಯರು ಸಂಗ್ರಹಿಸಿದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.
ಈ ಸಂಬಂಧ ಅಪಾರ್ಟ್‌ಮೆಂಟ್ ನಿವಾಸಿ ಹಾಗೂ ವಕೀಲೆ ನಿಶಾ ಅವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅದರ ಆಧಾರದ ಮೇಲೆ ಅಸೋಸಿಯೇಷನ್ ಅಧ್ಯಕ್ಷ ಅರುಣ್ ಕುಲಕರ್ಣಿ, ಕಾರ್ಯದರ್ಶಿ ಅಲೆಕ್ಸ್, ಖಜಾಂಚಿ ಪ್ರವೀಣ್ ನಾಯ್ಕರ್ ಸೇರಿದಂತೆ ಒಟ್ಟು 18 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮಾಹಿತಿಯ ಪ್ರಕಾರ, ಪ್ರತಿ ಫ್ಲಾಟ್‌ನಿಂದ ವರ್ಷಕ್ಕೆ ಸುಮಾರು 60 ಸಾವಿರ ರೂಪಾಯಿ ಸಂಗ್ರಹಿಸಲಾಗುತ್ತಿದ್ದು, 700 ಫ್ಲಾಟ್‌ಗಳಿಂದ ಒಟ್ಟು ಸುಮಾರು 3.6 ಕೋಟಿ ರೂಪಾಯಿ ವಸೂಲಿ ಮಾಡಲಾಗುತ್ತದೆ. ಆದರೆ, ಈ ಹಣವನ್ನು ಸರಿಯಾದ ನಿರ್ವಹಣೆಗೆ ಬಳಸದೇ ಲೆಕ್ಕಪತ್ರಗಳಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಕಳೆದ ಎರಡು ವರ್ಷಗಳಲ್ಲಿ ಸುಮಾರು 1.73 ಕೋಟಿ ರೂಪಾಯಿ ವಂಚನೆ ನಡೆದಿರುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕೆಲವು ಖರ್ಚುಗಳನ್ನು ತಪ್ಪಾಗಿ ತೋರಿಸಿರುವುದು ಗಮನಕ್ಕೆ ಬಂದಿದೆ. ವಾಟರ್‌ಮ್ಯಾನ್‌ಗೆ ಅನಗತ್ಯವಾಗಿ 2 ಲಕ್ಷ ರೂಪಾಯಿ ನೀಡಲಾಗಿದೆ ಎಂದು ದಾಖಲಾಗಿದೆ. ಜೊತೆಗೆ, ಆಡಿಟ್ ವೆಚ್ಚವನ್ನು ಒಂದು ವರ್ಷ 35 ಲಕ್ಷ ರೂಪಾಯಿ, ಮತ್ತೊಂದು ವರ್ಷ 24 ಲಕ್ಷ ರೂಪಾಯಿ ಎಂದು ತೋರಿಸಿರುವುದೂ ಅನುಮಾನಕ್ಕೆ ಕಾರಣವಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.
ಇದಲ್ಲದೆ, ಅಸೋಸಿಯೇಷನ್ ಹಣವನ್ನು ಆರೋಪಿಗಳು ತಮ್ಮ ಕುಟುಂಬದ ಸದಸ್ಯರ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಹೆಂಡತಿ ಹಾಗೂ ಮನೆ ಕೆಲಸದವರ ಬ್ಯಾಂಕ್ ಖಾತೆಗಳಿಗೂ ಹಣ ವರ್ಗಾವಣೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಬಾಗಲಗುಂಟೆ ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.
ಈ ಘಟನೆ ಹಿನ್ನೆಲೆ ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ನಲ್ಲಿ ಇಷ್ಟು ದೊಡ್ಡ ಪ್ರಮಾಣದ ವಂಚನೆ ಆರೋಪ ಕೇಳಿಬಂದಿರುವುದು ನಿವಾಸಿಗಳಲ್ಲಿ ಆತಂಕ ಮತ್ತು ಅಸಮಾಧಾನ ಉಂಟುಮಾಡಿದೆ.



