ಕಲಬುರಗಿ: ಬಾಲಕಿಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಮಲ್ಲಿಕಾರ್ಜುನ ಮುತ್ಯಾ ಅವರು ಕರ್ನಾಟಕ ಹೈಕೋರ್ಟ್ ಕಲಬುರಗಿ ವಿಭಾಗೀಯ ಪೀಠದ ಮೆಟ್ಟಿಲೇರಿದ್ದಾರೆ.
ಮಲ್ಲಿಕಾರ್ಜುನ ಮುತ್ಯಾ ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ದೂರು ದಾಖಲಿಸಿಕೊಂಡಿತ್ತು. ಈ ಕುರಿತು ಯಾದಗಿರಿ ಎಸ್‌ಪಿಗೆ ಪತ್ರ ಬರೆದ ಬಳಿಕ, ಗೋಗಿ ಪೊಲೀಸ್ ಠಾಣೆ ಯಲ್ಲಿ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು.
ಇದೀಗ ಪ್ರಕರಣ ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವ ಮುತ್ಯಾ, ಬಾಲಕಿಯ ಪೋಷಕರು ಸ್ವತಃ ದೂರು ನೀಡಿಲ್ಲದಿದ್ದರೂ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಹೀಗಾಗಿ ಎಫ್‌ಐಆರ್ ರದ್ದುಪಡಿಸುವಂತೆ ಮನವಿ ಮಾಡಿದ್ದಾರೆ. ಈ ಸಂಬಂಧ ಸೋಮವಾರ (ಮಾ.2) ಹೈಕೋರ್ಟ್ ವಿಚಾರಣೆ ನಡೆಸಲಿದೆ.



