ಡೆಹ್ರಾಡೂನ್: ಉತ್ತರಾಖಂಡದ ಪ್ರಸಿದ್ಧ ಬದರಿನಾಥ ದೇವಾಲಯದಲ್ಲಿ ಭಕ್ತರು ನೀಡಿದ ಕಾಣಿಕೆ ಹಾಗೂ ದೇಣಿಗೆ ಹಣ ದುರುಪಯೋಗವಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಮೂವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಆದೇಶದ ಮೇರೆಗೆ ರಚಿಸಲಾಗಿರುವ ಸಮಿತಿಗೆ ಗರ್ವಾಲ್ ಆಯುಕ್ತ ಆನಂದ್ ಸ್ವರೂಪ್ ನೇತೃತ್ವ ವಹಿಸಲಿದ್ದಾರೆ. ರಾಷ್ಟ್ರೀಯ ಆರೋಗ್ಯ ಮಿಷನ್ನ ವ್ಯವಸ್ಥಾಪಕ ನಿರ್ದೇಶಕ ಸಂದೀಪ್ ತಿವಾರಿ ಹಾಗೂ ಹಣಕಾಸು ನಿರ್ದೇಶಕ ಜಗತ್ ಸಿಂಗ್ ಚೌಹಾಣ್ ಸಮಿತಿಯ ಸದಸ್ಯರಾಗಿದ್ದಾರೆ.
ದೇಣಿಗೆ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿದೆ. ಜೊತೆಗೆ ದೇವಸ್ಥಾನದ ಆಡಳಿತ ವ್ಯವಸ್ಥೆ ಹಾಗೂ ಹಣ ಎಣಿಕೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕಗೊಳಿಸುವ ಜವಾಬ್ದಾರಿಯನ್ನೂ ನೀಡಲಾಗಿದೆ.
ಇದೇ ವೇಳೆ ಶ್ರೀ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯು ಆಂತರಿಕ ತನಿಖೆ ನಡೆಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಅಕ್ರಮದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ದೇವಾಲಯ ಸಮಿತಿಯ ಖಾಸಗಿ ಕಾರ್ಯದರ್ಶಿ ಪ್ರಮೋದ್ ನೌಟಿಯಾಲ್ ಅವರನ್ನು ಅಮಾನತು ಮಾಡಲಾಗಿದೆ.
ಬದರಿನಾಥ ಧಾಮದಲ್ಲಿ ಕಾಣಿಕೆ ಹಣ ಎಣಿಕೆ ವೇಳೆ ಅಕ್ರಮ ನಡೆದಿದೆ ಎನ್ನಲಾದ ವಿಡಿಯೋಗಳು ಹಾಗೂ ಸಾಮಾಜಿಕ ಜಾಲತಾಣದ ಪೋಸ್ಟ್ಗಳು ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳೀಯ ಸಂಘಟನೆಯೊಂದು ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿತ್ತು.
ಇನ್ನು ಎಣಿಕೆ ಕೊಠಡಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳ ಬದಲಾವಣೆ ಕುರಿತು ವಿವಾದ ಉಂಟಾಗಿದ್ದು, ಇದು ನಿಯಮಿತ ಪ್ರಕ್ರಿಯೆ ಎಂದು ದೇವಾಲಯ ಸಮಿತಿ ಸ್ಪಷ್ಟನೆ ನೀಡಿದೆ. ಹಳೆಯ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಸುರಕ್ಷಿತವಾಗಿ ಸಂಗ್ರಹಿಸಲಾಗಿದ್ದು, ತನಿಖಾ ತಂಡಕ್ಕೆ ನೀಡಲಾಗುವುದು ಎಂದು ತಿಳಿಸಿದೆ.



