ಬೆಂಗಳೂರು: ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣ ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.
ಈ ಪ್ರಕರಣದ ಸ್ಥಿತಿಗತಿಯ ಬಗ್ಗೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಅಪೂರ್ಣ ಮಾಹಿತಿ ನೀಡಿದೆ ಎಂಬ ಆರೋಪದೊಂದಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ಬಿ ರಿಪೋರ್ಟ್ ಸಲ್ಲಿಕೆಯಾಗಿದ್ದರೂ ಅಪೂರ್ಣ ಮಾಹಿತಿ?
ದೂರಿನ ಪ್ರಕಾರ, ಅಲೋಕ್ ಕುಮಾರ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ 2024ರಲ್ಲೇ ಸಿಬಿಐ ಬಿ ರಿಪೋರ್ಟ್ ಸಲ್ಲಿಸಿತ್ತು. ನ್ಯಾಯಾಲಯವೂ ಈ ವರದಿಯನ್ನು ಅಂಗೀಕರಿಸಿತ್ತು ಎಂದು ದಿನೇಶ್ ಕಲ್ಲಹಳ್ಳಿ ತಿಳಿಸಿದ್ದಾರೆ.
ಆದರೆ, ಪ್ರಕರಣದ ತನಿಖೆ ಇನ್ನೂ ಬಾಕಿ ಉಳಿದಿದೆ ಎಂಬ ಅರ್ಥ ಮೂಡುವ ರೀತಿಯಲ್ಲಿ ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಲಾಗಿದೆ ಎಂಬುದು ಅವರ ಆರೋಪ. ಪ್ರಕರಣದ ನೈಜ ಸ್ಥಿತಿಗತಿ ಕುರಿತು ನ್ಯಾಯಾಲಯಕ್ಕೆ ತಪ್ಪು ಮಾಹಿತಿ ಸಲ್ಲಿಸಲು ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ:
ಸರ್ಕಾರ ನ್ಯಾಯಾಲಯಕ್ಕೆ ಸಲ್ಲಿಸುವ ಮಾಹಿತಿಯಲ್ಲಿ ನಿಖರತೆ ಮತ್ತು ಪಾರದರ್ಶಕತೆ ಇರಬೇಕು. ಪ್ರಕರಣದ ಸ್ಥಿತಿಯನ್ನು ತಪ್ಪಾಗಿ ಬಿಂಬಿಸಿರುವುದು ಸಾಬೀತಾದರೆ, ಅದು ಸಂಬಂಧಪಟ್ಟ ಅಧಿಕಾರಿಗಳ ಪ್ರತಿಷ್ಠೆಗೆ ಮಾತ್ರವಲ್ಲದೆ ಸರ್ಕಾರದ ನ್ಯಾಯಾಂಗ ಪ್ರಕ್ರಿಯೆಯ ವಿಶ್ವಾಸಾರ್ಹತೆಗೂ ಧಕ್ಕೆ ತರಬಹುದು ಎಂಬ ಅಂಶವನ್ನು ದೂರಿನಲ್ಲಿ ಪ್ರಸ್ತಾಪಿಸಲಾಗಿದೆ.
ಹೀಗಾಗಿ ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿ, ಅಗತ್ಯ ತಿದ್ದುಪಡಿ ಮಾಡುವುದರ ಜತೆಗೆ ಲೋಪಕ್ಕೆ ಹೊಣೆಗಾರರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ.



