ನವದೆಹಲಿ: ಕಾಂಗ್ರೆಸ್ ಪಕ್ಷವು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಿದೆ ಎಂದು ಆರೋಪಿಸಿ ಬಿಜೆಪಿ ಸಂಸದರು ಸಂಸತ್ತಿನಲ್ಲಿ ಇಂದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಕುಸಿದುಬಿದ್ದಿದ್ದು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನನ್ನನ್ನು ತಳ್ಳಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಸ್ಥಳದಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ, ನಾನು ಮೆಟ್ಟಿಲ ಬಳಿ ನಿಂತಿದ್ದಾಗ ರಾಹುಲ್ ಗಾಂಧಿ ಒಬ್ಬ ಸಂಸದರನ್ನು ತಳ್ಳಿದರು. ಆ ಸಂಸದ ನನ್ನ ಮೇಲೆ ಬಿದ್ದು ನಾನು ಕೆಳಗೆ ಬಿದ್ದೆ, ಆಗ ನನ್ನ ತಲೆಗೆ ಗಾಯವಾಯಿತು’ಎಂದು ಆರೋಪಿಸಿದ್ದಾರೆ. ನಂತರ ಸಂಸದ ಪ್ರತಾಪ್ ಸಾರಂಗಿ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಫರೂಕಾಬಾದ್ ಬಿಜೆಪಿ ಸಂಸದ ಮುಖೇಶ್ ರಜಪೂತ್ ಕೂಡ ರಾಹುಲ್ ಗಾಂಧಿ ಅವರನ್ನು ತಳ್ಳಿದ್ದಾರೆ ಎಂದು ಆರೋಪಿಸಿದ್ದಾರೆ.
ಚಳಿಗಾಲದ ಅಧಿವೇಶನದಲ್ಲಿ ʻಸಂವಿಧಾನʼ ಕುರಿತ ಚರ್ಚೆ ವೇಳೆ ರಾಜ್ಯಸಭೆಯಲ್ಲಿ ಅಮಿತ್ ಶಾ ಅವರು ಮಾತನಾಡುತ್ತಾ, ʻಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಇದೊಂದು ಫ್ಯಾಷನ್ ಆಗಿಬಿಟ್ಟಿದೆ. ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಅವರಿಗೆ ಸ್ವರ್ಗದಲ್ಲಿ ಸ್ಥಾನವಾದರೂ ಸಿಗುತ್ತಿತ್ತುʼ ಎಂದು ಹೇಳಿದ್ದರು.
ಈ ಕುರಿತ ವೀಡಿಯೋಗಳನ್ನು ವಿಕ್ಷ ನಾಯಕರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಕೇಂದ್ರ ಗೃಹ ಸಚಿವರು ರಾಜೀನಾಮೇ ನೀಡಬೇಕು, ಅಂಬೇಡ್ಕರ್ ವಿರುದ್ಧದ ಟೀಕೆಗೆ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ನಡುವೆ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.