ಹುಬ್ಬಳ್ಳಿ: ಸಾರ್ವಜನಿಕ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ತಂದಿರುವ Amendment Bill-2026 ಅನ್ನು ಲೋಕಸಭೆ ಅಂಗೀಕರಿಸಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಜಾಲವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಕೇಂದ್ರ ನೂತನ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ಈ ತಿದ್ದುಪಡಿ ಮಸೂದೆ ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಠಿಣ ಕಾನೂನು ಚೌಕಟ್ಟನ್ನು ಒದಗಿಸಲಿದೆ. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಸಾರ್ವಜನಿಕ ಪರೀಕ್ಷೆಗಳಲ್ಲಿ ಅಕ್ರಮ ನಡೆಸುವವರ ವಿರುದ್ಧ ಕಠಿಣ ಶಿಕ್ಷೆ ವಿಧಿಸುವ ನಿಯಮಗಳನ್ನು ಇದರಲ್ಲಿ ಅಳವಡಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಪರೀಕ್ಷಾ ಅಕ್ರಮ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ತ್ವರಿತ ನ್ಯಾಯಾಲಯಗಳ ಸ್ಥಾಪನೆಯೂ ಮಹತ್ವದ ಕ್ರಮವಾಗಿದ್ದು, ಇದರಿಂದ ಪ್ರಕರಣಗಳ ವಿಚಾರಣೆ ವೇಗವಾಗಿ ಪೂರ್ಣಗೊಳ್ಳಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.
ಈ ತಿದ್ದುಪಡಿ ಮಸೂದೆ ಜಾರಿಯಿಂದ ದೇಶದಾದ್ಯಂತ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಹಾಗೂ ವಿಶ್ವಾಸಾರ್ಹತೆ ಮತ್ತಷ್ಟು ಬಲಗೊಳ್ಳಲಿದೆ. ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳ ವಿರುದ್ಧ ಕೇಂದ್ರ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಬದ್ಧವಾಗಿದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.



