ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡಿದ್ದು, ಹೋಟೆಲ್‌ನಲ್ಲೇ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಬಿಜೆಪಿ ಪಕ್ಷದ ಮೂಲಗಳು ಖಚಿತಪಡಿಸಿವೆ.
ವೈದ್ಯರ ತಂಡದಿಂದ ಚಿಕಿತ್ಸೆ, 2 ಗಂಟೆ ವಿಶ್ರಾಂತಿ ಸಲಹೆ: ಅಮಿತ್ ಶಾ ಅವರೊಂದಿಗೆ ದೆಹಲಿಯಿಂದ ಆಗಮಿಸಿರುವ ವೈದ್ಯ ಅರುಣ್ ಪ್ರತಾಪ್ ಅವರನ್ನೊಳಗೊಂಡ ವಿಶೇಷ ವೈದ್ಯರ ತಂಡವೇ ಗೃಹ ಸಚಿವರ ಆರೋಗ್ಯ ವಿಚಾರಣೆ ನಡೆಸಿ ಚಿಕಿತ್ಸೆ ನೀಡುತ್ತಿದೆ. ವೈದ್ಯರು ಸಚಿವರಿಗೆ ಸುಮಾರು ಎರಡು ಗಂಟೆಗಳ ಕಾಲ ಕಡ್ಡಾಯ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ವಿಶ್ರಾಂತಿ ಪಡೆದ ಬಳಿಕ ಅಮಿತ್ ಶಾ ಅವರು ಹುಬ್ಬಳ್ಳಿಯಿಂದ ನೇರವಾಗಿ ದೆಹಲಿಗೆ ವಾಪಸ್ ತೆರಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಹೋಟೆಲ್‌ಗೆ ಅಧಿಕಾರಿಗಳ ದಂಡು, ಪರಿಸ್ಥಿತಿ ಮೇಲ್ವಿಚಾರಣೆ: ಗೃಹ ಸಚಿವರ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಂಡ ವಿಷಯ ತಿಳಿಯುತ್ತಿದ್ದಂತೆಯೇ ಧಾರವಾಡ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಭುವನೇಶ ಪಾಟೀಲ್ ಮತ್ತು ಐಜಿಪಿ ಲಾಬುರಾಮ್ ಅವರು ಖಾಸಗಿ ಹೋಟೆಲ್‌ಗೆ ಭೇಟಿ ನೀಡಿ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸಿದ್ದಾರೆ.
ಕೆಎಲ್‌ಇ ಆಸ್ಪತ್ರೆ ಉದ್ಘಾಟನೆಗೆ ಬಂದಿದ್ದ ಗೃಹ ಸಚಿವರು: ಅಮಿತ್ ಶಾ ಅವರು ಶುಕ್ರವಾರ ತಡರಾತ್ರಿ ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಹಾಗೂ ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಹಲವು ನಾಯಕರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದರು. ಶನಿವಾರ ಹುಬ್ಬಳ್ಳಿಯಲ್ಲಿ ನಡೆಯಲಿರುವ ಕೆಎಲ್‌ಇ (KLE) ಸಂಸ್ಥೆಯ ನೂತನ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಮಿತ್ ಶಾ ಅವರು ಆಗಮಿಸಿದ್ದರು.



