ಚಿಕ್ಕಬಳ್ಳಾಪುರ: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯ ಮೇಲೆ ಹಲ್ಲೆ ನಡೆಸಿ ಕೊಲೆಗೈದು, ಕಿವಿಯಲ್ಲಿದ್ದ ಚಿನ್ನದ ಓಲೆಗಳನ್ನು ಕಳವು ಮಾಡಿರುವ ದುರ್ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಬಸವನಪುರ ಗ್ರಾಮದಲ್ಲಿ ನಡೆದಿದೆ.
80 ವರ್ಷದ ಸುಬ್ಬಮ್ಮ ಮೃತ ವೃದ್ಧೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ವೃದ್ಧೆಯ ತಲೆಗೆ ಬಲವಾಗಿ ಹಲ್ಲೆ ನಡೆಸಿದ್ದಾನೆ. ಬಳಿಕ ಕಿವಿಗಳನ್ನು ಕತ್ತರಿಸಿ, ಕಿವಿಯಲ್ಲಿದ್ದ ಚಿನ್ನದ ಓಲೆಗಳನ್ನು ದೋಚಿಕೊಂಡು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಕೆಲಸಕ್ಕೆ ತೆರಳಿದ್ದ ಸುಬ್ಬಮ್ಮ ಅವರ ಮಗಳು ಮನೆಗೆ ಮರಳಿದಾಗ, ವೃದ್ಧೆ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣ ಅವರನ್ನು ಗೌರಿಬಿದನೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುಬ್ಬಮ್ಮ ಮೃತಪಟ್ಟಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



