ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶ್ರೀಕ್ಷೇತ್ರ ಧರ್ಮಸ್ಥಳದ ಕುರಿತಾಗಿ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಮಂಗಳವಾರ ಶಿರಹಟ್ಟಿಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ನೇತೃತ್ವದಲ್ಲಿ ಪಟ್ಟಣದ ಶ್ರೀ ಜ.ಫಕೀರೇಶ್ವರ ಮಠದಿಂದ ಬೃಹತ್ ಮೆರವಣಿಗೆ ನಡೆಸಿ ಪ್ರಮುಖ ವೃತ್ತಗಳಲ್ಲಿ ಧರ್ಮದ ಉಳಿವಿಗಾಗಿ ಧರ್ಮಯುದ್ಧ ಎಂಬ ಘೋಷಣೆಗಳನ್ನು ಕೂಗುತ್ತಾ ನೆಹರು ವೃತ್ತದಲ್ಲಿ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಚಂದ್ರು ಲಮಾಣಿ, ಶ್ರೀಕ್ಷೇತ್ರ ಧರ್ಮಸ್ಥಳವು ಕೇವಲ ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಾಂತರ ಭಕ್ತರನ್ನು ಹೊಂದಿದೆ. ಹಿಂದೂಗಳಿಗೆ ಇದು ಪ್ರಮುಖ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಯನ್ನು ಅಪಮಾನಿಸುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಹಾಗೂ ಎಡಚರರು ಸುಳ್ಳು ಪ್ರಚಾರವನ್ನು ಮಾಡುತ್ತಿದ್ದಾರೆ.
ಇಂತಹ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುವ ಷಡ್ಯಂತ್ರ್ಯ ನಡೆದಿದೆ. ಅನಾಮಿಕ ವ್ಯಕ್ತಿಯೊಬ್ಬ ಯಾವುದೇ ಆಧಾರಗಳಿಲ್ಲದೇ ಮಾಡಿದ ಆರೋಪಕ್ಕೆ ರಾಜ್ಯ ಸರಕಾರ ಲಕ್ಷಾಂತರ ರೂ.ಗಳನ್ನು ವ್ಯಯಿಸುತ್ತಿದೆ. ಈ ಅನಾಮಿಕನ ಹಿಂದಿರುವ ದುಷ್ಟ ವ್ಯಕ್ತಿಗಳು ಯಾರು ಮತ್ತು ಅವರು ಮಾಡುತ್ತಿರುವ ಸಂಚುಗಳೇನು ಎಂಬುದನ್ನು ಸರಕಾರ ತಿಳಿಸಿಲ್ಲ. ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಅವಮಾನಿಸುತ್ತಿರುವ ಸಮಾಜ ವಿರೋಧಿ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರನ್ನು ಶಿಕ್ಷೆಗೆ ಒಳಪಡಿಸಬೇಕು. ರಾಜ್ಯದ ಸಿಎಂ ಮತ್ತು ಡಿಸಿಎಂ ರಾಜ್ಯದ ಜನತೆಯ ಕ್ಷಮೆಯಾಚನೆ ಮಾಡಬೇಕೆಂದು ಒತ್ತಾಯಿಸಿದರು.
ಬಿಜೆಪಿ ಶಿರಹಟ್ಟಿ ಮಂಡಲದ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ, ನಗರ ಘಟಕದ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಜಿ.ಪಂ ಮಾಜಿ ಸದಸ್ಯ ಶಿವಪ್ರಕಾಶ ಮಹಾಜನಶೆಟ್ಟರ, ಬಿ.ಡಿ. ಪಲ್ಲೇದ, ಜಾನು ಲಮಾಣಿ, ಫಕ್ಕೀರೇಶ ರಟ್ಟಿಹಳ್ಳಿ, ಸಂತೋಷ ಕುರಿ, ತಿಮ್ಮರಡ್ಡಿ ಮರಡ್ಡಿ, ಮೋಹನ ಗುತ್ತೆಮ್ಮನವರ, ಅಕ್ಬರಸಾಬ ಯಾದಗಿರಿ, ಬಸವರಾಜ ವಡವಿ, ಶಿವಣ್ಣ ಲಮಾಣಿ, ನಂದಾ ಪಲ್ಲೇದ, ಅನಿಲ ಮುಳಗುಂದ, ಪ್ರವೀಣ ಪಾಟೀಲ, ಅಶೋಕ ಶಿರಹಟ್ಟಿ, ಹಾಲಪ್ಪ ಸೂರಣಗಿ, ಕಿರಣ ಮಹಾಂತಶೆಟ್ಟರ, ಬಸವರಾಜ ಕಲ್ಲೂರ ಮುಂತಾದವರು ಉಪಸ್ಥಿತರಿದ್ದರು.