ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ನಿಧನರಾಗಿದ್ದಾರೆ. ಉತ್ತರ ಕರ್ನಾಟಕದ ಜನಪ್ರಿಯ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ರಾಜು ತಾಳಿಕೋಟೆ ಚಲನಚಿತ್ರದಲ್ಲಿ ಪ್ರಸಿದ್ಧರಾದ ಬಳಿಕ ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು. ರಾಜು ತಾಳಿಕೋಟೆ ಅವರು ಭಾನುವಾರದಿಂದ (ಅ.12) ಮೂರು ದಿನಗಳ ಕಾಲ ಶೂಟಿಂಗ್ ನಲ್ಲಿ ಭಾಗಿಯಾಗಬೇಕಿತ್ತು. ಆದರೆ ಅಷ್ಟರಲ್ಲೇ ಅವರು ನಿಧನರಾಗಿದ್ದಾರೆ.
ಶೈನ್ ಶೆಟ್ಟಿ ನಟನೆಯ ಹೊಸ ಸಿನಿಮಾದಲ್ಲಿ ನಟಿಸಲು ರಾಜು ತಾಳಿಕೋಟೆ ಅವರು ಉಡುಪಿಗೆ ಬಂದಿದ್ದರು. ಚಿತ್ರೀಕರಣ ಮುಗಿಸಿ ರಾತ್ರಿ ವಿಶ್ರಾಂತಿ ಪಡೆಯುತ್ತಿರುವಾಗ ಭಾನುವಾರ ರಾತ್ರಿ ಹೃದಯಾಘಾತ ಆಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು.
ಈ ಮೊದಲು ಕೂಡ ರಾಜು ತಾಳಿಕೋಟೆ ಅವರಿಗೆ ಹೃದಯಾಘಾತ ಆಗಿತ್ತು. ಆಗ ಚಿಕಿತ್ಸೆ ನೀಡಿ ಸ್ಟಂಟ್ ಹಾಕಲಾಗಿತ್ತು. ಈಗ ಒತ್ತಡ ಜಾಸ್ತಿ ಆಗಿದ್ದರಿಂದ ಮತ್ತೆ ಹಾರ್ಟ್ ಅಟ್ಯಾಕ್ ಆಗಿರಬಹುದು. ವಿಜಯಪುರದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಅವರ ಪುತ್ರ ತಿಳಿಸಿದ್ದಾರೆ.
ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ ಎಂದಾಗಿತ್ತು. ಅವರು ಕೇವಲ ನಟನಾಗಿರದೆ, ತಾಳಿಕೋಟಿಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲಿಕರೂ ಆಗಿದ್ದರು.
ರಂಗಭೂಮಿಯಲ್ಲಿ ಅಪಾರ ಅನುಭವ ಪಡೆದ ನಂತರ ಅವರು ಕನ್ನಡ ಚಲನಚಿತ್ರ ರಂಗಕ್ಕೆ ಪ್ರವೇಶಿಸಿದರು. ಪ್ರಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ (2009) ಚಿತ್ರದ ಮೂಲಕ ಅವರು ಜನಪ್ರಿಯತೆ ಗಳಿಸಿದರು. ನಂತರ ‘ಪಂಚರಂಗಿ’, ‘ಮತ್ತೊಂದ್ ಮದುವೇನಾ..!’ ಮತ್ತು ‘ಮೈನಾ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು.