ನವದೆಹಲಿ/ಬೆಂಗಳೂರು: ಬರದಿಂದ ಬಳಲುತ್ತಿರುವ ಕರ್ನಾಟಕಕ್ಕೆ ಮತ್ತೆ ಕಾವೇರಿ ನೀರಿನ ಬಿಕ್ಕಟ್ಟಿನ ಆತಂಕ ಎದುರಾಗಿದೆ. ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸು ಮಾಡಿದೆ.

ದೆಹಲಿಯಲ್ಲಿ ಇಂದು ನಡೆದ ಸಭೆಯ ಬಳಿಕ, ಮುಂದಿನ 15 ದಿನಗಳ ಕಾಲ ಪ್ರತಿದಿನ 3,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ಸಮಿತಿ ಶಿಫಾರಸು ಮಾಡಿದೆ.
ಸುಪ್ರೀಂ ಕೋರ್ಟ್ ಮೊರೆ ಹೋದ ತಮಿಳುನಾಡು
ಕಳೆದ ಅಕ್ಟೋಬರ್ 23ರಿಂದ ಕರ್ನಾಟಕ ಕಾವೇರಿ ನದಿ ನೀರು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಪ್ರತಿದಿನ 3,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಿಸಿದ್ದರೂ ಕರ್ನಾಟಕ ನೀರು ಬಿಡುಗಡೆ ಮಾಡಿಲ್ಲ ಎಂದು ತಮಿಳುನಾಡು ದೂರಿತ್ತು.
ಕಾವೇರಿ ನೀರು ಹರಿಸದ ಕಾರಣ ರಾಜ್ಯದ ಸುಮಾರು 4 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ ಎಂದು ತಮಿಳುನಾಡು ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಈ ವಿಚಾರವನ್ನು ತ್ವರಿತವಾಗಿ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು. ಮನವಿಯನ್ನು ಪರಿಶೀಲಿಸುವುದಾಗಿ ಮುಖ್ಯ ನ್ಯಾಯಮೂರ್ತಿಗಳ ಪೀಠ ಭರವಸೆ ನೀಡಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಕಾವೇರಿ ನೀರು ನಿಯಂತ್ರಣ ಸಮಿತಿ ಇದೀಗ ತಮಿಳುನಾಡಿಗೆ ನೀರು ಹರಿಸುವಂತೆ ಶಿಫಾರಸು ಮಾಡಿದೆ.
ಕೆಆರ್ಎಸ್ ಜಲಾಶಯದ ನೀರಿನ ಮಟ್ಟ ಕುಸಿತ
ಇನ್ನೊಂದೆಡೆ, ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ ನವೆಂಬರ್ ಆರಂಭದಲ್ಲೇ 99 ಅಡಿಗೆ ಕುಸಿದಿದೆ.
ಬೇಸಿಗೆ ಆರಂಭಕ್ಕೂ ಮುನ್ನವೇ ಜಲಾಶಯದ ನೀರಿನ ಮಟ್ಟ ಇಳಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಒಂದೆಡೆ ರಾಜ್ಯದ ಕುಡಿಯುವ ನೀರು ಮತ್ತು ಕೃಷಿ ಅಗತ್ಯಗಳ ಚಿಂತೆ, ಮತ್ತೊಂದೆಡೆ ತಮಿಳುನಾಡಿಗೆ ನೀರು ಹರಿಸುವಂತೆ ಶಿಫಾರಸು ಮಾಡಿರುವುದು ಕರ್ನಾಟಕಕ್ಕೆ ಮತ್ತಷ್ಟು ಸಂಕಷ್ಟ ತಂದಿದೆ.









