ಬೆಂಗಳೂರು: ಸ್ವಜನಪಕ್ಷಪಾತ ಸೇರಿದಂತೆ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತ್ತಿನ ಬೆನ್ನಲ್ಲೇ, ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲೂ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ನೇಮಕಾತಿಯಲ್ಲಿ ಭಾರೀ ಗೋಲ್ಮಾಲ್ ನಡೆದಿದ್ದು, ಸಂಪೂರ್ಣ ಆಯ್ಕೆ ಪ್ರಕ್ರಿಯೆಯನ್ನು ರದ್ದುಗೊಳಿಸಿ ನ್ಯಾಯಸಮ್ಮತ ತನಿಖೆ ನಡೆಸಬೇಕು ಎಂದು ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.
ಜನವರಿ 8ರಂದು 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆ ನಡೆಸಲಾಗಿತ್ತು. ಜುಲೈ 17ರಂದು ಫಲಿತಾಂಶ ಪ್ರಕಟವಾದ ಬಳಿಕ ಹಲವು ಅಭ್ಯರ್ಥಿಗಳು ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಒಂದು ಹುದ್ದೆಗೆ ಸುಮಾರು ₹80 ಲಕ್ಷದವರೆಗೆ ಹಣ ಪಡೆದು ನೇಮಕಾತಿ ನಡೆಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಸಂಬಂಧ 50ಕ್ಕೂ ಹೆಚ್ಚು ಅಭ್ಯರ್ಥಿಗಳು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪ್ರಕರಣ ಹೊಸ ಚರ್ಚೆಗೆ ಕಾರಣವಾಗಿದೆ.
ಅಭ್ಯರ್ಥಿಗಳ ಆರೋಪದ ಪ್ರಕಾರ, ನೇಮಕಾತಿ ಪ್ರಕ್ರಿಯೆಯಲ್ಲಿ ಸುಮಾರು ಶೇ.60ರಷ್ಟು ಅಕ್ರಮ ನಡೆದಿದೆ. ಈ ಪ್ರಕರಣದಲ್ಲಿ ಅಮಾನತ್ತಾಗಿರುವ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸೇರಿದಂತೆ ಕೆಲವು ಕೆಪಿಎಸ್ಸಿ ಸದಸ್ಯರ ಹೆಸರೂ ಕೇಳಿಬರುತ್ತಿದ್ದು, ಮಧ್ಯವರ್ತಿಗಳ ಮೂಲಕ ಭಾರೀ ಹಣದ ವ್ಯವಹಾರ ನಡೆದಿದೆ ಎಂದು ದೂರಲಾಗಿದೆ.
ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕಾಂತ್ ಕುಮಾರ್ ಮಾತನಾಡಿ, “ಗ್ರೂಪ್–ಎ ಹುದ್ದೆಯಾಗಿರುವ ಪಶು ವೈದ್ಯಾಧಿಕಾರಿ ಹುದ್ದೆಗಳಿಗೆ ಹಣ ನೀಡುವಂತೆ ಅಭ್ಯರ್ಥಿಗಳನ್ನು ಸಂಪರ್ಕಿಸಲಾಗಿದೆ ಎಂಬ ಮಾಹಿತಿ ಇದೆ. ಇಂತಹ ಗಂಭೀರ ಆರೋಪಗಳಿರುವ ಕಾರಣ ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿ ಸ್ವತಂತ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.
ಇದೇ ವೇಳೆ, ಪ್ರತಿಭಾವಂತ ಅಭ್ಯರ್ಥಿಗಳು 300ಕ್ಕೂ ಹೆಚ್ಚು ಅಂಕ ಗಳಿಸುವುದೇ ಕಷ್ಟವಾಗಿರುವ ಸಂದರ್ಭದಲ್ಲಿ ಕೆಲವರ ಸಂಬಂಧಿಕರು ಅತಿ ಹೆಚ್ಚು ಅಂಕಗಳೊಂದಿಗೆ ಮೆರಿಟ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಅಭ್ಯರ್ಥಿಗಳು ಪ್ರಶ್ನಿಸಿದ್ದಾರೆ.



