ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಪಡಿತರ ಚೀಟಿಯ ಇ-ಕೆವೈಸಿ (e-KYC) ಮಾಡಿಸಿಕೊಳ್ಳಲು ನೀಡಲಾಗಿದ್ದ ಗಡುವನ್ನು ರಾಜ್ಯ ಸರ್ಕಾರ ನವೆಂಬರ್ 30ರವರೆಗೆ ವಿಸ್ತರಿಸಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಆಹಾರ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ಈ ಹಿಂದೆ ನವೆಂಬರ್ 10ರವರೆಗೆ ಇ-ಕೆವೈಸಿ ಮಾಡಿಸಲು ಅವಕಾಶ ನೀಡಲಾಗಿತ್ತು. ಆದರೆ, ಇನ್ನೂ ಲಕ್ಷಾಂತರ ಫಲಾನುಭವಿಗಳು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಗಡುವು ವಿಸ್ತರಿಸಲಾಗಿದೆ.
ಆಹಾರ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಒಟ್ಟು 2.67 ಕೋಟಿ ಫಲಾನುಭವಿಗಳ ಪೈಕಿ 2.27 ಕೋಟಿ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಂಡಿದ್ದಾರೆ. ಇನ್ನು ಸುಮಾರು 39 ಲಕ್ಷ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳುವುದು ಬಾಕಿ ಇದೆ.
ಪಡಿತರ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ನಿರಂತರವಾಗಿ ದೊರೆಯಬೇಕಾದರೆ ಬಾಕಿ ಇರುವ ಅರ್ಹ ಫಲಾನುಭವಿಗಳು ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಇಲಾಖೆ ಸೂಚಿಸಿದೆ.
ನವೆಂಬರ್ 30 ಕೊನೆಯ ಗಡುವು!
ನವೆಂಬರ್ 30ರವರೆಗೆ ಮಾತ್ರ ಇ-ಕೆವೈಸಿ ಮಾಡಿಸಲು ಅವಕಾಶ ನೀಡಲಾಗಿದ್ದು, ಆ ಬಳಿಕ ಯಾವುದೇ ಕಾರಣಕ್ಕೂ ಗಡುವು ವಿಸ್ತರಿಸುವುದಿಲ್ಲ ಎಂದು ಆಹಾರ ಇಲಾಖೆ ಸ್ಪಷ್ಟಪಡಿಸಿದೆ. ಹೀಗಾಗಿ ಬಾಕಿ ಇರುವ ಪಡಿತರ ಚೀಟಿದಾರರು ಕೊನೆಯ ದಿನದವರೆಗೆ ಕಾಯದೆ ಆದಷ್ಟು ಬೇಗ ಇ-ಕೆವೈಸಿ ಮಾಡಿಸಿಕೊಳ್ಳುವುದು ಉತ್ತಮ.









