ಮಂಗಳೂರು: ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಂಗಳೂರಿನ ವೆಲೆನ್ಸಿಯಾ ಚರ್ಚ್ನ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೋ ವಿರುದ್ಧ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದೆ. ಈಗಾಗಲೇ 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ ಪಾದ್ರಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಇದರ ಬೆನ್ನಲ್ಲೇ 13 ವರ್ಷದ ಮತ್ತೊಬ್ಬ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎರಡನೇ ಪ್ರಕರಣ ದಾಖಲಾಗಿದೆ.
ಹೊಸ ಪ್ರಕರಣದ ತನಿಖೆಯನ್ನು ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿಗೆ ವಹಿಸಲಾಗಿದೆ. ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಕುರಿತು ಪೊಲೀಸರು ತನಿಖೆ ಮುಂದುವರಿಸಿರುವ ನಡುವೆಯೇ ಮೈಸೂರು ಮೂಲದ ಒಡನಾಡಿ ಸೇವಾ ಸಂಸ್ಥೆ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ವಿರುದ್ಧವೂ ಗಂಭೀರ ಆರೋಪ ಮಾಡಿದೆ.
ಬಿಷಪ್ ವಿರುದ್ಧ ಒಡನಾಡಿ ಸಂಸ್ಥೆಯ ಗಂಭೀರ ಆರೋಪ
ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ಪೀಟರ್ ಪೌಲ್ ಸಲ್ಡಾನ ಅವರಿಗೆ ಪಾದ್ರಿ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ಕುರಿತು ಮೊದಲೇ ಮಾಹಿತಿ ಇತ್ತು. ಆದರೂ ಪೊಲೀಸರಿಗೆ ದೂರು ನೀಡದೆ ಚರ್ಚ್ ಮಟ್ಟದಲ್ಲಿ ಆಂತರಿಕ ತನಿಖೆ ನಡೆಸುವ ಮೂಲಕ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಲಾಗಿದೆ ಎಂದು ಒಡನಾಡಿ ಸೇವಾ ಸಂಸ್ಥೆ ಆರೋಪಿಸಿದೆ.
ಕಳೆದ ಆಗಸ್ಟ್ ತಿಂಗಳಲ್ಲಿಯೇ ಐವರು ಬಾಲಕರು ಹಾಗೂ ಅವರ ಪೋಷಕರು ಬಿಷಪ್ ಅವರನ್ನು ಭೇಟಿಯಾಗಿ ಪಾದ್ರಿ ವಿರುದ್ಧ ದೂರು ನೀಡಿದ್ದರು ಎನ್ನಲಾಗಿದೆ. ಆದರೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದಂತಹ ಗಂಭೀರ ಆರೋಪ ಕೇಳಿಬಂದಿದ್ದರೂ ಪೊಲೀಸ್ ಠಾಣೆಗೆ ಮಾಹಿತಿ ನೀಡುವ ಬದಲು ಚರ್ಚ್ ಮಟ್ಟದಲ್ಲಿಯೇ ವಿಚಾರಣೆ ನಡೆಸಲಾಗಿದೆ ಎಂಬುದು ಸಂಸ್ಥೆಯ ಆಕ್ಷೇಪವಾಗಿದೆ.
ಪೋಕ್ಸೋ ಕಾಯಿದೆ 2012ರ ಸೆಕ್ಷನ್ 19 ಮತ್ತು 21ರ ಅಡಿಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಕುರಿತು ಮಾಹಿತಿ ನೀಡುವ ಕಾನೂನುಬದ್ಧ ಜವಾಬ್ದಾರಿ ಇದೆ. ಈ ನಿಯಮವನ್ನು ಪಾಲಿಸಿಲ್ಲ ಎಂದು ಆರೋಪಿಸಿರುವ ಒಡನಾಡಿ ಸಂಸ್ಥೆ, ಬಿಷಪ್ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದೆ.
ಎಫ್ಐಆರ್ ದಾಖಲಿಸಲು ವಿಳಂಬ; ಪಾದ್ರಿಗೆ ಜಾಮೀನು ಸಿಗಲು ಅನುಕೂಲವಾಯಿತೇ?
ಒಡನಾಡಿ ಸೇವಾ ಸಂಸ್ಥೆಯ ಸಂಸ್ಥಾಪಕ ಸ್ಟ್ಯಾನ್ಲಿ ಅವರು ಪ್ರಕರಣದ ನಿರ್ವಹಣೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಾದ್ರಿ ವಿರುದ್ಧದ ಆರೋಪಗಳ ಬಗ್ಗೆ ಮೊದಲೇ ಮಾಹಿತಿ ಇದ್ದರೂ ಎಫ್ಐಆರ್ ದಾಖಲಿಸುವಲ್ಲಿ ವಿಳಂಬವಾಗಿದೆ. ಈ ವಿಳಂಬವೇ ಆರೋಪಿಗೆ ಜಾಮೀನು ಪಡೆಯಲು ಅನುಕೂಲ ಮಾಡಿಕೊಟ್ಟಿದೆ ಎಂದು ಅವರು ಆರೋಪಿಸಿದ್ದಾರೆ.
ಪ್ರಕರಣದಲ್ಲಿ ಬಿಷಪ್ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಯಬೇಕು. ಬಿಷಪ್ ಮಾತ್ರವಲ್ಲದೆ ವೆಲೆನ್ಸಿಯಾ ಚರ್ಚ್ನ ಉಪಾಧ್ಯಕ್ಷ ಹಾಗೂ ಬಿಷಪ್ ಹೌಸ್ನ ಪ್ರಮುಖರ ವಿರುದ್ಧವೂ ತನಿಖೆ ನಡೆಸಿ, ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒಡನಾಡಿ ಸಂಸ್ಥೆ ಆಗ್ರಹಿಸಿದೆ.
ಮತ್ತಷ್ಟು ಮಕ್ಕಳು ಸಂತ್ರಸ್ತರಾಗಿರುವ ಶಂಕೆ; ಎಸ್ಐಟಿ ತನಿಖೆಗೆ ಒತ್ತಾಯ
ಪಾದ್ರಿ ವಿರುದ್ಧ ಈಗಾಗಲೇ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಇನ್ನೂ ಹಲವು ಮಕ್ಕಳು ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವ ಸಾಧ್ಯತೆಯಿದೆ ಎಂದು ಒಡನಾಡಿ ಸಂಸ್ಥೆ ಆತಂಕ ವ್ಯಕ್ತಪಡಿಸಿದೆ.
ಹೀಗಾಗಿ ಪ್ರಕರಣವನ್ನು ಕೇವಲ ಎರಡು ದೂರುಗಳಿಗೆ ಸೀಮಿತಗೊಳಿಸದೆ ಸಮಗ್ರ ತನಿಖೆ ನಡೆಸಬೇಕು. ಆರೋಪಗಳ ಹಿಂದಿನ ಸತ್ಯಾಂಶವನ್ನು ಪತ್ತೆಹಚ್ಚಲು ಪ್ರತ್ಯೇಕ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕು ಎಂದು ಸಂಸ್ಥೆ ಒತ್ತಾಯಿಸಿದೆ.
ಮಕ್ಕಳ ಸುರಕ್ಷತೆ ಹಾಗೂ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಪೊಲೀಸ್ ಇಲಾಖೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂಬುದು ಸಂಸ್ಥೆಯ ಪ್ರಮುಖ ಬೇಡಿಕೆಯಾಗಿದೆ.
ಪ್ರಾರ್ಥನೆಗೆ ತೆರಳಿದ್ದ ಬಾಲಕರಿಗೆ ಕಿರುಕುಳ ನೀಡಿದ ಆರೋಪ
ಮಂಗಳೂರಿನ ವೆಲೆನ್ಸಿಯಾ ಚರ್ಚ್ನ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೋ ವಿರುದ್ಧ ಈ ಹಿಂದೆ ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿತ್ತು.
ಪ್ರಾರ್ಥನೆಗಾಗಿ ಚರ್ಚ್ಗೆ ತೆರಳುತ್ತಿದ್ದ ಬಾಲಕರನ್ನು ಪಾದ್ರಿ ಪ್ರೀತಿಯಿಂದ ಮಾತನಾಡಿಸುವ ನೆಪದಲ್ಲಿ ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಇಬ್ಬರು ಬಾಲಕರು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದರು ಎನ್ನಲಾಗಿದೆ.
ಮಕ್ಕಳಿಂದ ವಿಷಯ ತಿಳಿದ ಪೋಷಕರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.
ಪ್ರಕರಣ ದಾಖಲಾಗುತ್ತಿದ್ದಂತೆಯೇ ಸಿಪ್ರಿಯನ್ ಪಿಂಟೋ ತಲೆಮರೆಸಿಕೊಂಡಿದ್ದರು ಎನ್ನಲಾಗಿದ್ದು, ಪೊಲೀಸರು ಹುಡುಕಾಟ ನಡೆಸಿ ಬಳಿಕ ಅವರನ್ನು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಪಾದ್ರಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಎರಡನೇ ಪೋಕ್ಸೋ ಪ್ರಕರಣದ ತನಿಖೆ ಚುರುಕು
ಮೊದಲ ಪ್ರಕರಣದಲ್ಲಿ ಜಾಮೀನು ಪಡೆದಿರುವ ಫಾದರ್ ಸಿಪ್ರಿಯನ್ ಪಿಂಟೋ ವಿರುದ್ಧ ಇದೀಗ 13 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮತ್ತೊಂದು ಪ್ರಕರಣ ದಾಖಲಾಗಿದೆ. ಎರಡನೇ ಪ್ರಕರಣದ ತನಿಖೆಯನ್ನು ಕೇಂದ್ರ ಉಪವಿಭಾಗದ ಎಸಿಪಿಗೆ ವಹಿಸಲಾಗಿದೆ.
ಇದರ ನಡುವೆಯೇ ಬಿಷಪ್ ಹಾಗೂ ಚರ್ಚ್ ಆಡಳಿತದ ಪ್ರಮುಖರ ವಿರುದ್ಧ ಒಡನಾಡಿ ಸಂಸ್ಥೆ ಮಾಡಿರುವ ಆರೋಪಗಳು ಪ್ರಕರಣಕ್ಕೆ ಮತ್ತೊಂದು ತಿರುವು ನೀಡಿವೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶ ಬಹಿರಂಗಪಡಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.










